More

    ಸಾಂಸ್ಕೃತಿಕ ಕಾರ್ಯಕ್ರಮ, ಮೆರವಣಿಗೆಗಿಲ್ಲ ಅವಕಾಶ, ಈ ಬಾರಿ ಸರಳ ರಾಜ್ಯೋತ್ಸವ

    ಚಿಕ್ಕಬಳ್ಳಾಪುರ: ಕರೊನಾ ತುರ್ತು ಸಂದರ್ಭದ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಮುಂಜಾಗ್ರತಾ ಕ್ರಮಗಳೊಂದಿಗೆ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

    ಜಿಪಂ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಕನ್ನಡಪರ ಸಂಘಟನೆಗಳ ಮುಖಂಡರನ್ನೊಳಗೊಂಡ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮ ಸಿದ್ಧತೆ ಹಾಗೂ ಪಾಲಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

    ಕರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ನಿಯಂತ್ರಿಸಲು ಜಿಲ್ಲಾಡಳಿತ ಶ್ರಮಿಸುತ್ತಿದೆ. ಇದರ ನಡುವೆ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯೂ ನಡೆಯುತ್ತದೆ. ಜನರ ಆರೋಗ್ಯ ಹಿತದೃಷ್ಟಿಯಿಂದ ನಗರದ ಸರ್.ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನ.1 ರಂದು ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

    ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ಮೆರವಣಿಗೆ ಕೈಗೊಳ್ಳುವಂತಿಲ್ಲ. ಸೋಂಕು ಹರಡುವಿಕೆ ನಿಯಂತ್ರಣದ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪರಸ್ಪರ ಅಂತರ ಕಾಪಾಡಿಕೊಳ್ಳಬೇಕು. ಚಿಕ್ಕ ಮಕ್ಕಳು, 60 ವರ್ಷ ಮೇಲ್ಪಟ್ಟವರು ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ ಎಂದು ಸೂಚಿಸಿದರು.

    ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಕನ್ನಡಪರ ಸಂಘಟನೆಗಳ ಮುಖಂಡರು ಆಗಮಿಸಿ, ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಬೇಕು ಎಂದರು. ಜಿಪಂ ಸಿಇಒ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್ ಮತ್ತಿತರರು ಇದ್ದರು.

    ಸರ್ವೋತ್ತಮ ಸೇವಾ ಪ್ರಶಸ್ತಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ನಾಡು-ನುಡಿ, ಕಲೆ-ಸಂಸ್ಕೃತಿ, ಕ್ರೀಡೆ ಮತ್ತು ಸಂಗೀತ ಸೇರಿ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಸಿರುವ 5 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ, ಸರ್ಕಾರಿ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಡಿಸಿ ತಿಳಿಸಿದರು.

    ಸೂಕ್ತ ವ್ಯವಸ್ಥೆಗೆ ಸೂಚನೆ : ರಾಜ್ಯೋತ್ಸವದಂದು ಪೊಲೀಸ್ ಇಲಾಖೆ ನೇತೃತ್ವದಲ್ಲಿ ಪಥ ಸಂಚಲನ ನಡೆಯುತ್ತದೆ. ತೆರೆದ ಜೀಪಿನಲ್ಲಿ ತೆರಳಿ ಗೌರವ ಸ್ವೀಕಾರ, ಧ್ವಜವಂದನೆ, ನಾಡು ನುಡಿಯ ಸಂದೇಶ ಸೇರಿ ನಾನಾ ಪ್ರಕ್ರಿಯೆಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕ್ರೀಡಾಂಗಣದಲ್ಲಿ ಸುಸಜ್ಜಿತ ವೇದಿಕೆ ನಿರ್ಮಾಣ, ವೇದಿಕೆಯ ಎಡ ಮತ್ತು ಬಲ ಭಾಗದಲ್ಲಿ ನಿಯಮಾನುಸಾರ ಪರಸ್ಪರ ಅಂತರೊಂದಿಗೆ ಆಸನಗಳ ವ್ಯವಸ್ಥೆ ಮತ್ತು ಸ್ವಚ್ಛತೆ ಕೈಗೊಳ್ಳಲು, ಮೂಲ ಸೌಕರ್ಯ ಕಲ್ಪಿಸಲು ನಗರಸಭೆಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಥರ್ಮಲ್ ಸ್ಕಾೃನಿಂಗ್, ಸ್ಯಾನಿಟೈಸ್ ವ್ಯವಸ್ಥೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts