More

    ಸುಂಟಿಕೊಪ್ಪ ಪಿಎಚ್‌ಸಿಗೆ ಡಿಎಚ್‌ಒ ಭೇಟಿ

    ಸುಂಟಿಕೊಪ್ಪ : ಡೆಂಘೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
    ಸುಂಟಿಕೊಪ್ಪ ಪ್ರಾಥಮಿಕ ಕೇಂದ್ರವು ಹೋಬಳಿ ಮಟ್ಟದ ಕೇಂದ್ರವಾಗಿದ್ದು, 7 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಖಾಯಿಲೆಗಳು ಬಾಧಿಸಿದರೂ ಈ ಆರೋಗ್ಯ ಕೇಂದ್ರವನ್ನೇ ಅವಲಂಭಿಸಬೇಕಿದೆ. ನಿತ್ಯ 100ಕ್ಕೂ ಅಧಿಕ ಜನ ಚಿಕಿತ್ಸೆಗೆ ಇಲ್ಲಿಗೆ ಬರುತ್ತಾರೆ. ಆಸ್ಪತ್ರೆಯಲ್ಲಿ ಕಾಯಂ ವೈದ್ಯರಿಲ್ಲ. ರಾತ್ರಿ ವೇಳೆ ಸಹ ವೈದ್ಯರು ಲಭ್ಯವಿರುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವುದರಿಂದ ನಿತ್ಯ ನೂರಾರು ವಾಹನಗಳಲ್ಲಿ ಪ್ರವಾಸಿಗರು ತೆರಳುವ ಸಂದರ್ಭ ಅವಘಡಗಳು ಸಂಭವಿಸಿದಾಗ ಗಾಯಗೊಂಡವರು ಇಲ್ಲಿಗೇ ಬರಬೇಕು. ಮೃತಪಟ್ಟವರ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯರು, ಡಿ ಗ್ರೂಪ್ ನೌಕರರ ಕೊರತೆ ಇದೆ. ರಾತ್ರಿವೇಳೆ ಹೆರಿಗೆಗೆಂದು ಬಂದರೆ ವೈದ್ಯರೇ ಇರವುದಿಲ್ಲ. ಕೂಡಲೇ ವೈದ್ಯರು, ಶುಶ್ರೂಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಆಸ್ಪತ್ರೆಯ ಆಂಬ್ಯುಲೆನ್ಸ್ ವಾಹನ ಸಾರ್ವಜನಿಕರ ಸೇವೆಗೆ ಲಭ್ಯವಾಗುತ್ತಿಲ್ಲ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ.ಎ.ಉಸ್ಮಾನ್ ದೂರಿದರು.
    ಡಿಎಚ್‌ಒ ಡಾ.ಸತೀಶ್ ಕುಮಾರ್ ಮಾತನಾಡಿ, ವೈದ್ಯರ ಕೊರತೆ ಎಲ್ಲೆಡೆ ಇದೆ. ಇತರೆ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಲು ಪ್ರಯತ್ನಿಸುವುದಾಗಿ ಹೇಳಿದರು. ಡೆಂಘೆ ಜ್ವರ ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಕಂಡು ಬಂದಿದ್ದು, ಜಿಲ್ಲಾಡಳಿತ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಆತಂಕ ಪಡುವುದು ಬೇಡ. ಸ್ವಚ್ಛತೆಗೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts