More

    ಸೋಂಕಿತರ ಸಂಪರ್ಕಿತರನ್ನು ಶೀಘ್ರ ಪತ್ತೆ ಹಚ್ಚಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ಸೂಚನೆ, ಡಿಸಿ ಕಚೇರಿಯಲ್ಲಿ ಕೋವಿಡ್ ಪರಿಶೀಲನಾ ಸಭೆ

    ಬೆಂಗಳೂರು ಗ್ರಾಮಾಂತರ: ಕೋವಿಡ್ ಸೋಂಕಿತರ ಸಂಪರ್ಕಿತರನ್ನು ಶೀಘ್ರ ಪತ್ತೆ ಹಚ್ಚಿ, ಕೋವಿಡ್ ಪರೀಕ್ಷೆ ನಡೆಸುವುದರಿಂದ ಸೋಂಕು ಪಸರಿಸುವಿಕೆ ತಡೆಗಟ್ಟಬಹುದಾಗಿದ್ದು, ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ಸೂಚಿಸಿದರು.

    ದೇವನಹಳ್ಳಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

    ಸೋಂಕಿತರ ಸರಿಯಾದ ವಿಳಾಸ ಹಾಗೂ ದೂರವಾಣಿ ಸಂಖ್ಯೆ ಸಂಗ್ರಹಿಸಿ, ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರಿಗೆ ಸೂಕ್ತ ಸಮಯಕ್ಕೆ ವೈದ್ಯಕೀಯ ಕಿಟ್ ವಿತರಣೆ ಮಾಡಬೇಕು. ಪ್ರತಿ ದಿನ ದೂರವಾಣಿ ಮೂಲಕ ಸಂಪರ್ಕಿಸಿ ಆರೋಗ್ಯದ ಮಾಹಿತಿ ಪಡೆಯದು ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.

    ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದ ಹೇಮಲಯಾ, ಜಲಜೀವನ್ ಮಿಷನ್ ಯೋಜನೆಯಡಿ ಕೆರೆ, ಕುಂಟೆ, ಗೋಕಟ್ಟೆ, ನಾಲೆ ಹಾಗೂ ಕಲ್ಯಾಣಿಗಳ ಸ್ವಚ್ಛತೆ ಹಾಗೂ ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಬೇಕು ಮತ್ತು ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡುವಂತೆ ಸೂಚಿಸಿದರು.

    ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ನಾಲ್ಕು ತಾಲೂಕುಗಳಿಗೆ ಆಕ್ಸಿಜನ್ ಕಾನ್ಸನ್‌ಟ್ರೇಟರ್ ನೀಡಲಾಗಿದೆ. ಕೋವಿಡ್ ಲಕ್ಷಣಗಳುಳ್ಳ ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರಿಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಹತ್ತು ಸಾವಿರ ಮೆಡಿಕಲ್ ಕಿಟ್ ತಲುಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ಮಾತನಾಡಿ, ಜಿಲ್ಲಾಮಟ್ಟದ ಅಧಿಕಾರಿಗಳನ್ನು ತಾಲೂಕುಮಟ್ಟಲ್ಲಿ, ತಾಲೂಕುಮಟ್ಟದ ಅಧಿಕಾರಿಗಳನ್ನು ಗ್ರಾಮ ಪಂಚಾಯಿತಿ ಹಂತದಲ್ಲಿ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಗ್ರಾಮಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ ಕೋವಿಡ್ ವಾರ್ ರೂಂ ಸ್ಥಾಪನೆ ಮಾಡಲಾಗಿದ್ದು, ಪ್ರತಿ ತಾಲೂಕಿನಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಹಾಗೂ ನಗರ ಪ್ರದೇಶಗಳಲ್ಲಿ ಇಂದಿರಾ ಕ್ಯಾಂಟೀನ್ ಮೂಲಕ ಉಚಿತವಾಗಿ ಆಹಾರ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಪೋಲಿಸ್ ವರಿಷ್ಠಾಧಿಕಾರಿ ಲಕ್ಷೀ ಗಣೇಶ್, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಮಹೇಶ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts