More

    ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಿ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಎಂ.ಕೋಟೆ ಸೂಚನೆ, ಜಿಲ್ಲಾ ಮಟ್ಟದ ಕಾರ್ಯಾಗಾರ

    ಬೆಂಗಳೂರು ಗ್ರಾಮಾಂತರ: ಸಫಾಯಿ ಕರ್ಮಚಾರಿಗಳ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳನ್ನು ಅಧಿಕಾರಿಗಳು ಪೂರ್ಣವಾಗಿ ಅನುಷ್ಠಾನಗೊಳಿಸುವ ಮೂಲಕ ಸಕಾಲದಲ್ಲಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಎಂ.ಕೋಟೆ ತಿಳಿಸಿದರು.

    ದೇವನಹಳ್ಳಿ ತಾಲೂಕು, ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶದ ವತಿಯಿಂದ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿಗಳ ಎಂ.ಎಸ್.ಕಾಯ್ದೆ 2014 ಅಂಶಗಳ ಬಗ್ಗೆ, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

    ಸಮಾಜದಲ್ಲಿ ಪ್ರತಿಯೊಬ್ಬರೂ ಸಮಾನತೆಯಿಂದ ಗೌರವಯುತವಾಗಿ ಬದುಕುವ ಹಕ್ಕು ಹೊಂದಿದ್ದಾರೆ. ಅದರಂತೆ ಸಫಾಯಿ ಕರ್ಮಚಾರಿಗಳು, ಪೌರ ಕಾರ್ಮಿಕರು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಸಮಾನತೆಯಿಂದ ಬದುಕಬೇಕಾದರೆ ಅವರಿಗೆ ಇರುವ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸಲು ಅಧಿಕಾರಿಗಳು ಗಮನಹರಿಸಿ ಅಷ್ಟೇ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

    ಮ್ಯಾನ್‌ಹೋಲ್‌ಗಿಳಿಸುವುದು ಅಪರಾಧ: ಮನುಷ್ಯರನ್ನು ಮ್ಯಾನ್‌ಹೋಲ್‌ಗೆ ಇಳಿಸುವುದು ಅಪರಾಧವಾಗಿದೆ. ಯಂತ್ರಗಳನ್ನು ಬಳಸುವ ಮೂಲಕ ಮತ್ತು ನಗರಸಭೆ, ಪುರಸಭೆ, ಗ್ರಾಪಂ ವ್ಯಾಪ್ತಿಯಲ್ಲಿ ನೈರ್ಮಲ್ಯರಹಿತ ಶೌಚಗೃಹಗಳನ್ನು ನಿರ್ಮಿಸುವ ಮೂಲಕ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಮುಕ್ತ ಕರ್ನಾಟಕ ನಿರ್ಮಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಎಂದು ಶಿವಣ್ಣ ತಿಳಿಸಿದರು.
    ಪೌರ ಕಾರ್ಮಿಕರಿಗೆ ಕನಿಷ್ಠ ವೇತನ, ವಿಮೆ ಸೌಲಭ್ಯ, ಸುರಕ್ಷತಾ ಪರಿಕರಗಳ ವಿತರಣೆ, ಶಿಕ್ಷಣ, ಆರೋಗ್ಯ ಸೇವೆ, ಗೃಹ ಭಾಗ್ಯ, ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಮಾನವೀಯತೆ ಜತೆಗೆ ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸಿ ಪೌರಕಾರ್ಮಿಕರ ಸ್ಥಿತಿ-ಗತಿ ಸುಧಾರಣೆಗೆ ಕ್ರಮ ವಹಿಸಬೇಕು ಎಂದು ಹೇಳಿದರು.

    ಕೋವಿಡ್‌ನಲ್ಲಿ ಶ್ಲಾಘನೀಯ ಸೇವೆ: ಕೋವಿಡ್ ಸಂದರ್ಭದಲ್ಲಿ ಪೌರ ಕಾರ್ಮಿಕರ ಸೇವೆ ಶ್ಲಾಘನೀಯವಾದುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮೆಚ್ಚುಗೆ ವ್ಯಕ್ತಪಡಿಸಿದರು. ಪೌರ ಕಾರ್ಮಿಕರ ಕುರಿತು ಕಾಳಜಿವಹಿಸಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿರುವ ಪೌರ ಕಾರ್ಮಿಕರನ್ನು ಗುರುತಿಸಿ ಆಯುಷ್ಮಾನ್ ಕಾರ್ಡ್ ಹಾಗೂ ಇತರ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದರು. ಎಲ್ಲಾ ಪೌರ ಕಾರ್ಮಿಕರಿಗೂ ಎರಡನೇ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಆದ್ಯತೆ ಮೇರೆಗೆ ಪೌರಕಾರ್ಮಿಕರಿಗೆ ಮೂರನೇ ಡೋಸ್ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು ಎಲ್ಲರೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಆರ್.ರಮಾ ಸಫಾಯಿ ಕರ್ಮಚಾರಿಗಳ ಎಂ.ಎಸ್. ಕಾಯ್ದೆ ಕುರಿತು ಮಾಹಿತಿ ನೀಡಿದರು. ನಂತರ ಆಯೋಗದ ಅಧ್ಯಕ್ಷ ಶಿವಣ್ಣ ಎಂ.ಕೋಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳೊಡನೆ ಸಫಾಯಿ ಕರ್ಮಚಾರಿ, ಪೌರಕಾರ್ಮಿಕರ ಕುಂದುಕೊರತೆಗಳ ಕುರಿತ ಸಭೆ ನಡೆಸಿದರು ಹಾಗೂ ಜಿಲ್ಲಾಮಟ್ಟದ ಪ್ರಗತಿ ಪರಿಶೀಲಿಸಿದರು.
    ತರಬೇತಿ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿ ಮುಖಂಡರ ಜತೆ ಚರ್ಚೆ ನಡೆಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts