

ಮೈಸೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರೂಪಿಸಲಾಗಿರುವ ಎಲ್ಲ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆ ಜೊತೆಗೆ ಪರಿಸರ ಸ್ನೇಹಿ ಧ್ವಜ ಬಳಕೆಗೆ ಹೆಚ್ಚು ಒತ್ತು ನೀಡಬೇಕು. ಪ್ಲಾಸ್ಟಿಕ್ ಧ್ವಜ ಬಳಕೆ ನಿಷೇಧಿಸಬೇಕು, ಎಲ್ಲ ಸ್ವಾತಂತ್ರ್ಯ ಹೋರಾಟಗಾರರನ್ನು ಒಳಗೊಂಡಂತೆ ಸ್ವಾತಂತ್ರೃ ಹೋರಾಟಗಾರರನ್ನು ಸ್ಮರಿಸುವ ಹಾಗೂ ದೇಶಭಕ್ತಿಯನ್ನು ಮೆರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳು ಆಯೋಜನೆಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ರೂಪಿಸಲು ಡಿಡಿಪಿಐ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕ್ರಮ ಕೈಗೊಳ್ಳಬೇಕು. ಪೆರೇಡ್ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ನಡೆಯುವ ಸಂದರ್ಭದಲ್ಲಿ ಪೋಲಿಸ್ ಬಂದೋಬಸ್ತ್ ಒದಗಿಸಬೇಕು ಎಂದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ಮನೆಯವರನ್ನು ಗುರುತಿಸಿ ಸನ್ಮಾನಿಸಬೇಕು. ಇಲಾಖಾವಾರು ನಿಯೋಜಿಸಿರುವ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಇತರರು ಇದ್ದರು.