More

    ಹಮ್ಮಿಗಿ ಬ್ಯಾರೇಜ್​ನಿಂದ ನದಿಗೆ ನೀರು

    ಮುಂಡರಗಿ: ಮಲೆನಾಡಿನ ಕಳಸ, ಚಿಕ್ಕಮಗಳೂರು ಮೊದಲಾದ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ತಾಲೂಕಿನ ಹಮ್ಮಿಗಿ ಬಳಿಯ ಸಿಂಗಟಾಲೂರ ಬ್ಯಾರೇಜ್​ನ 26 ಗೇಟ್​ಗಳ ಪೈಕಿ 19 ಗೇಟ್​ಗಳ ಮೂಲಕ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.

    ಗಾಜನೂರಿನ ತುಂಗಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದ ನೀರು ಬರುತ್ತಿದೆ. ಹಾಗೆಯೇ ವಿವಿಧೆಡೆ ಮಳೆ ಸುರಿಯುತ್ತಿರುವುದರಿಂದ ನದಿಗೆ ನೀರು ಹರಿದು ಬರುತ್ತಿದ್ದು ಬ್ಯಾರೇಜ್​ನಿಂದ ಗುರುವಾರ 64,980 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಯಿತು ಎಂದು ಸಿಂಗಟಾಲೂರ ಬ್ಯಾರೇಜ್ ಎಇಇ ಪ್ರಕಾಶ ಐ. ತಿಳಿಸಿದ್ದಾರೆ. ಸಿಂಗಟಾಲೂರ ಬ್ಯಾರೇಜ್ 3.12 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಹಿನ್ನೀರಿನಿಂದ ಗುಮ್ಮಗೋಳ, ಬಿದರಳ್ಳಿ, ವಿಠಲಾಪುರ ಮತ್ತು ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಅಲ್ಲಿಪುರ ಗ್ರಾಮ ಮುಳುಗಡೆ ಪ್ರದೇಶಕ್ಕೆ ಒಳಪಟ್ಟಿವೆ. ಮುಳುಗಡೆ ಪ್ರದೇಶಕ್ಕೆ ಒಳಪಟ್ಟ ಗ್ರಾಮಗಳನ್ನು ಇದುವರೆಗೆ ಸ್ಥಳಾಂತರಿಸದ ಕಾರಣ ಬ್ಯಾರೇಜ್​ನಲ್ಲಿ ಸದ್ಯ 1.98 ಟಿಎಂಸಿ ನೀರು ಮಾತ್ರ ಸಂಗ್ರಹಿಸಲಾಗುತ್ತಿದೆ. ಹೆಚ್ಚುವರಿ ನೀರನ್ನು ನದಿಗೆ ಹರಿ ಬಿಡಲಾಗುತ್ತದೆ. ಸಿಂಗಟಾಲೂರ ಬ್ಯಾರೇಜ್​ಗೆ 1.50 ಲಕ್ಷ ಕ್ಯೂಸೆಕ್​ಗೂ ಅಧಿಕ ನೀರು ಹರಿದು ಬಂದರೆ ಮುಳುಗಡೆ ಪ್ರದೇಶಕ್ಕೆ ಒಳಪಡುವಂತಹ ನಾಲ್ಕು ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗುತ್ತದೆ. ಕಳೆದ ವರ್ಷ ಆಗಸ್ಟ್​ನಲ್ಲೇ ತಾಲೂಕಿನ ಮೂರು ಗ್ರಾಮಗಳು ಸೇರಿ ಮತ್ತಿತರ ಗ್ರಾಮಗಳಲ್ಲಿ ಪ್ರವಾಹ ಉಂಟಾಗಿತ್ತು. ಪ್ರಸಕ್ತ ವರ್ಷದಲ್ಲೂ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದು ನದಿ ಭಾಗದ ಗ್ರಾಮಗಳಲ್ಲಿ ಪ್ರವಾಹದ ಆತಂಕ ಉಂಟಾಗಿದೆ. ಅಧಿಕಾರಿಗಳು ಈ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts