More

    ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ

    ಸೋಮು ಲದ್ದಿಮಠ ರೋಣ

    ತಾಲೂಕಿನಲ್ಲಿ ಪಟ್ಟಣ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ತಾಲೂಕಿನ ಗ್ರಾಮೀಣ ಭಾಗದ, ಕಿರಾಣಿ, ಚಹಾದ ಅಂಗಡಿ, ಪಾನ್​ಶಾಪ್ ಸೇರಿ ಹಲವು ಮನೆಗಳಲ್ಲಿ ನಿಯಮಬಾಹಿರವಾಗಿ ಕದ್ದುಮುಚ್ಚಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ಕಿರಿಕಿರಿಯಾಗುತ್ತಿದೆ.

    ತಾಲೂಕಿನಾದ್ಯಂತ ಸತತ ಬರ, ನೆರೆ ಹಾವಳಿಯಿಂದಾಗಿ ದುಡಿಯುವ ಕೈಗಳಿಗೆ ಕೆಲಸ ಇಲ್ಲವಾಗಿದೆ. ರೈತರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆಯೂ ಇಲ್ಲದಾಗಿದೆ. ಈ ತರನಾಗಿ ಆರ್ಥಿಕ ಸಂಕಷ್ಟದಲ್ಲಿದ್ದರೂ ಗ್ರಾಮೀಣ ಭಾಗದ ಕೆಲವರು ಗ್ರಾಮದಲ್ಲಿಯೇ ಸಿಗುವ ಮದ್ಯ ದ ಚಟಕ್ಕೆ ಬಿದ್ದಿದ್ದಾರೆ. ಇದರಿಂದ ಮತ್ತಷ್ಟು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ.

    ಮನೆಗೆ ಸೇರಬೇಕಾದ ಪಡಿತರ ಅಕ್ಕಿಯನ್ನು ಮದ್ಯವ್ಯಸನಿಗಳು ಕಾಳಸಂತೆಯಲ್ಲಿ ಮಾರಿ ಅದರಿಂದ ಬಂದ ಹಣದಲ್ಲಿ ಮದ್ಯ ಖರೀದಿಸಿ ಕುಡಿಯುತ್ತಿದ್ದಾರೆ. ಹೀಗಾಗಿ ಮದ್ಯ ವ್ಯಸನಿಗಳ ಹೆಂಡತಿ ಮಕ್ಕಳು ಹಸಿವಿನಿಂದ ನರಳುವಂತಾಗಿದೆ. ಗ್ರಾಮೀಣ ಭಾಗದಲ್ಲಿ ಅವ್ಯಾಹತವಾಗಿ ಅಕ್ರಮ ಮದ್ಯ ಮಾರಾಟವಾಗುತ್ತಿದ್ದರೂ ಇದನ್ನು ತಡೆಯಬೇಕಿದ್ದ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.

    ತಾಪಂ ಕೆಡಿಪಿ ಸಭೆಯಲ್ಲಿ ಪ್ರಸ್ತಾಪ: ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಇತ್ತೀಚೆಗೆ ಜರುಗಿದ ತಾಲೂಕು ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಬಕಾರಿ ಅಧಿಕಾರಿ ಬಿ.ಎಂ. ನಾಯಕ ಮಾಹಿತಿ ನೀಡಿದರು. ಆಗ ಮಧ್ಯ ಪ್ರವೇಶಿಸಿದ ಶಾಸಕ ಕಳಕಪ್ಪ ಬಂಡಿ, ತಾಲೂಕಿನ ಬಹುತೇಕ ಹಳ್ಳಿಗಳಲ್ಲಿನ ಕೆಲ ಕಿರಾಣಿ, ಚಹಾದಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆಯಂತೆ. ಇದನ್ನು ನಿಯಂತ್ರಿಸಲು ನೀವೇನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

    ಮಲ್ಲಾಪೂರದಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆದಿದೆ. ಈ ಕುರಿತು ತಾಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮ ಸಭೆ, ಜನಸ್ಪಂದನ ಸಭೆ, ಗ್ರಾಪಂ ಸಾಮಾನ್ಯ ಸಭೆಯಲ್ಲಿ ರ್ಚಚಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಮುಲಾಜಿಲ್ಲದೆ ಪ್ರಕರಣ ದಾಖಲಿಸಬೇಕು ಎಂದು ಅಬಕಾರಿ, ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇನೆ.

    | ಗಿರಿಜವ್ವ ಹಟ್ಟಿ

    ಅಧ್ಯಕ್ಷೆ ಮಲ್ಲಾಪೂರ ಗ್ರಾಪಂ

    ಅಕ್ರಮ ಮದ್ಯ ಮಾರಾಟದ ಬಗ್ಗೆ ಗ್ರಾಪಂ ಅಧ್ಯಕ್ಷೆಯ ದೂರಿನನ್ವಯ ಗ್ರಾಮದಲ್ಲಿ ಡಂಗುರ ಸಾರಲಾಗಿದೆ. ಕಿರಾಣಿ, ಚಹಾದಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವವರಿಗೆ ಸಾಕಷ್ಟು ಬಾರಿ ನೋಟಿಸ್ ನೀಡಿ ಎಚ್ಚರಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

    | ಎಂ. ಲೋಹಿತ

    ಪಿಡಿಒ ಮಲ್ಲಾಪೂರ ಗ್ರಾಪಂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts