ವಿಜಯವಾಣಿ ಸುದ್ದಿಜಾಲ ಕೋಲಾರ
ಹವಾಮಾನ ಬದಲಾವಣೆಯಿಂದ ಉಂಟಾಗುವ ಪರಿಣಾಮಗಳನ್ನು ಎದುರಿಸಲು, ನಿಯಂತ್ರಿಸಲು ಹಾಗೂ ಭವಿಷ್ಯದ ಹವಾಮಾನ ಬದಲಾವಣೆಯ ತೀವ್ರತೆಯನ್ನು ಕಡಿಮೆ ಮಾಡಲು ಇರುವ ಮೂಲಭೂತ ಜ್ಞಾನ ಹಾಗೂ ಮಾರ್ಪಾಡು ಪದ್ಧತಿಯನ್ನು ಸಮರ್ಪಕವಾಗಿ ಅಳವಡಿಸಿಕೊಂಡು ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್.ಪಿ.ಬಾಗೇವಾಡಿ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಸಹಯೋಗದಲ್ಲಿ ಹವಾಮಾನ ಬದಲಾವಣೆ ಕುರಿತಾದ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆಯ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹವಾಮಾನ ಬದಲಾವಣೆಯಿಂದ ಅಕಾಲಿಕ ಮಳೆ, ತಾಪಮಾನ ಹೆಚ್ಚಳ, ಚಂಡಮಾರುತ, ಪ್ರವಾಹ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಸಾರ್ವಜನಿಕರ ಜೀವನೋಪಾಯ ಮತ್ತು ಆರ್ಥಿಕತೆಯನ್ನು ಬೆಂಬಲಿಸುವ ಅನೇಕ ಉತ್ಪನ್ನಗಳನ್ನು ದುರ್ಬಲಗೊಳಿಸುತ್ತದೆ. ಜೊತೆಗೆ ನೈಸರ್ಗಿಕ ಪರಿಸರ ವ್ಯವಸ್ಥೆಯ ಮೇಲೂ ಪರಿಣಾಮ ಬೀರಲಿದ್ದು, ಕೃತಕ ಬುದ್ಧಿಮತ್ತೆ ಸೇರಿದಂತೆ ಮತ್ತಿತರ ತಂತ್ರಜ್ಞಾನಗಳ ಮೂಲಕ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.
ಪ್ರಕೃತಿಯೂ ಸಹ ತನ್ನದೇ ಆದ ವ್ಯವಸ್ಥೆಗಳನ್ನು ಒಳಗೊಂಡಿದೆ. ಅದರಲ್ಲಿ ಸ್ವಲ್ಪ ಏರಿಳಿತವಾದರೂ ಹಲವು ಅಸಮತೋಲನ ಸೃಷ್ಠಿಗೆ ಕಾರಣವಾಗುತ್ತದೆ. ನೀರಿನ ತಾಪಮಾನದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಸಹ ಮಾನ್ಸೂನ್ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಯೋಜನೆಗಳನ್ನು ಅನುಷ್ಠಾನ ಮಾಡುವಾಗ ಎದುರಾಗುವ ಸಾಮಾಜಿಕ ದುಷ್ಪರಿಣಾಮಗಳನ್ನು ಬಗ್ಗೆ ಯೋಚಿಸಿ ನಂತರ ಯೋಜನೆಗಳನ್ನು ರೂಪಿಸಬೇಕು. ಹವಾಮಾನ ವೈಪರಿತ್ಯವನ್ನು ನಿಯಂತ್ರಿಸುವ ಯೋಜನೆಗಳನ್ನು ಜಾಗತಿಕವಾಗಿ ಅನುಷ್ಠಾನ ಮಾಡುವ ಕುರಿತು ಎಂಪ್ರಿ ಸಂಸ್ಥೆಯು ತರಬೇತಿ ನೀಡಲಿದ್ದು, ತರಬೇತಿಯಲ್ಲಿ ಪಡೆದ ಮಾಹಿತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ಅಧಿಕಾರಿ ಎಸ್.ವಿಶ್ವಾಸ್ ಮಾತನಾಡಿ, ಜಿಲ್ಲೆಯಲ್ಲಿ ಹವಾಮಾನ ವೈಪರಿತ್ಯದಿಂದ ಉಂಟಾಗುವ ಸಮಸ್ಯೆಗಳನ್ನು ಬಗೆಹರಿಸಲು, ಇದರ ಬದಲಾವಣೆಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಇದು ಸೂಕ್ತ ಸಮಯವಾಗಿದೆ. ೨೦೧೫ ರಲ್ಲಿ ವಿಶ್ವಸಂಸ್ಥೆ ಹವಾಮಾನ ವೈಪರಿತ್ಯ ಬಗ್ಗೆ ಸುಸ್ಥಿರ ಅಭಿವೃದ್ಧಿ ಗುರಿಯನ್ನು ಅಳವಡಿಸಿಕೊಂಡಿದೆ. ಇದನ್ನು ದೇಶ, ರಾಜ್ಯ, ಜಿಲ್ಲೆ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಸಹ ಪರಿಣಾಮಕಾರಿ ಅನುಷ್ಠಾನಕ್ಕೆ ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ಯೋಜನ ನಿರ್ದೇಶಕರಾದ ವೆಂಕಟಾಚಲಪತಿ, ಸಂಪನ್ಮೂಲ ವ್ಯಕ್ತಿಗಳಾದ ಡಾ.ಸರಿತಾ ಭೂಯ, ಎಂ.ಎಚ್.ಲತಾ, ಡಾ.ವಿ.ಜಗನ್ನಾಥ್, ಡಾ.ಜಗದೀಶ್ ನಾಯಕ್, ಹೊಂಡ ಪರಿಸರ ಮುಖ್ಯಸ್ಥರಾದ ಚೈತನ್ಯ ಹಾಗೂ ಎಂ.ಯಶವAತ್ ಕುಮಾರ್, ಎಂಪ್ರಿ ಸಂಸ್ಥೆಯ ಜಾಗದಂಭ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಿತ್ರ ೦೩ ಕೆ.ಎಲ್.ಆರ್. ೦೫ : ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಸಹಯೋಗದಲ್ಲಿ ಹವಾಮಾನ ಬದಲಾವಣೆ ಕುರಿತಾದ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆಯ ಕುರಿತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿದ ಸಿ.ಇ.ಓ.ಪ್ರವೀಣ್ ಪಿ.ಬಾಗೇವಾಡಿ, ಯೋಜನಾಧಿಕಾರಿ ಎಸ್.ವಿಶ್ವನಾಥ್, ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಮುಂತಾದವರು ಇದ್ದರು.