10ಕ್ಕೆ ಸುವರ್ಣಸೌಧ ಮುತ್ತಿಗೆ

ದೇವನಹಳ್ಳಿ: ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಡಿ.10ರಂದು ಬೆಳಗ್ಗೆ 10ಗಂಟೆಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ತೀರ್ವನಿಸಲಾಗಿದೆ ಎಂದು ಪ್ರೊಫೆಸರ್ ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಜಿಜಿಹಳ್ಳಿ ಬಿ.ನಾರಾಯಣಸ್ವಾಮಿ ತಿಳಿಸಿದರು.

ರೈತರ ವಿವಿಧ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ರೈತರನ್ನು ಸರ್ಕಾರವೇ ಅಲ್ಲಗೆಳೆಯುತ್ತಿರುವುದರಿಂದ ಹೋರಾಟ ಅನಿವಾರ್ಯವಾಗಿದೆ ಎಂದರು.

ಸರ್ಕಾರವೇ ರೈತರನ್ನು ಗೂಂಡಾಗಳು, ರೌಡಿಗಳು ಎಂದು ಹೇಳುತ್ತಿದೆ. ರೈತರ ಸಮಸ್ಯೆ ಆಲಿಸಿದ್ದರೆೆ ರೈತರು ಬೀದಿಗೆ ಇಳಿದು ಹೋರಾಟ ಏಕೆ ಮಾಡುತ್ತಿದ್ದರು ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಅಪಾರ ಪ್ರಮಾಣದ ಬೆಳೆನಷ್ಟವಾಗಿದೆ. ನೂರು ತಾಲೂಕುಗಳು ಬರಪೀಡಿತವಾಗಿವೆ ಎಂದು ಸರ್ಕಾರವೇ ಘೋಷಿಸಿದೆ. ಆದರೂ ಸಹ ಪರಿಸ್ಥಿತಿ ನಿಭಾಯಿಸಲು ಯಾವುದೇ ವಿಶೇಷ ಅನುದಾನ ನೀಡಿಲ್ಲ ಎಂದು ಆರೋಪಿಸಿದರು.

ಗ್ರಾಮಾಂತರ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಕಾವೇರಿ ನೀರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪೂರೈಕೆ ಮಾಡಲಾಗುತ್ತಿದೆ. ಆದರೆ ವಿಮಾನ ನಿಲ್ದಾಣದಿಂದ ಕೂಗಳತೆ ದೂರದಲ್ಲಿರುವ ದೇವನಹಳ್ಳಿಗೆ ಪೂರೈಸಲು ಏಕೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಪ್ರಶ್ನಿಶಿಸಿದರು.

ಕಬ್ಬು ಬೆಳೆಗಾರರಿಗೆ ಇದುವರೆಗೂ ಹಣ ಬಿಡುಗಡೆಯಾಗದಿರುವುದು ಎಷ್ಟರ ಮಟ್ಟಿಗೆ ಸರಿ?, ಇದೇ ಮಾದರಿಯ ಸಾಕಷ್ಟು ಸಮಸ್ಯೆಗಳನ್ನು ಈಡೇರಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರೈತರು ಸರ್ಕಾರಕ್ಕೆ ತಕ್ಕಪಾಠ ಕಲಿಸಲು ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಮುಖಂಡರಾದ ಧಾರವಾಡ ನಾರಾಯಣಗೌಡ, ದೇಸಾಯಿ, ಕಾರವಾರ ಮೌಲಸಾಬ್, ಗ್ರಾಮಾಂತರ ಜಿಲ್ಲಾಧ್ಯಕ್ಷ ವಿ.ನಾಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಮುನಿಶಾಮಪ್ಪ, ಬಾಗೇಪಲ್ಲಿ ತಾಲೂಕು ಅಧ್ಯಕ್ಷ ಎಂ.ಎಸ್.ಚಲಪತಿ, ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ್, ಪ್ರಧಾನ ಕಾರ್ಯದರ್ಶಿ ಜಯಸಿಂಹ ಮತ್ತಿತರರು ಭಾಗವಹಿಸಿದ್ದರು.