More

    ಜಿಲ್ಲೆಯ ಅಭಿವೃದ್ಧಿಗೆ 1000 ಕೋಟಿ ರೂ.

    ಮದ್ದೂರು: ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಮೂಲಕ ಮಾರ್ಚ್ ಅಂತ್ಯದವರೆಗೆ 56 ಸಾವಿರ ಕೋಟಿ ರೂ. ಅನುದಾನವನ್ನು ಸಾರ್ವಜನಿಕರಿಗೆ ನೀಡಲಿದೆ. ಮುಂದಿನ ಒಂದು ವರ್ಷಕ್ಕೆ 69 ಸಾವಿರ ಕೋಟಿ ರೂ. ಅನುದಾನ ಬೇಕಾಗುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

    ಪಟ್ಟಣದ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಭಾನುವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಬಗ್ಗೆ ಮಾಹಿತಿ ನೀಡುವ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಕಳೆದ 8 ತಿಂಗಳಿಂದ ಜಿಲ್ಲೆಗೆ ಗ್ಯಾರಂಟಿ ಯೋಜನೆ ಜತೆಗೆ ಲೋಕೋಪಯೋಗಿ, ನೀರಾವರಿ ಸೇರಿದಂತೆ ಇತರ ಇಲಾಖೆಗಳ ಮೂಲಕ ಜಿಲ್ಲೆಯ ಅಭಿವೃದ್ಧಿಗೆ 1000 ಕೋಟಿ ರೂ. ಅನುದಾನ ನೀಡಿದೆ ಎಂದರು.

    ಮದ್ದೂರು ಶಾಸಕರು ತಾಲೂಕಿನ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಗೆ 50 ರಿಂದ 60 ಕೋಟಿ ರೂ., ನೀರಾವರಿ ಇಲಾಖೆಗೆ 250 ಕೋಟಿ ರೂ. ಅನುದಾನ ನೀಡಲಾಗಿದೆ. ತಾಲೂಕಿನಲ್ಲಿ ಅನ್ನಭಾಗ್ಯ ಯೋಜನೆಯಡಿ 73,000, ಗೃಹಲಕ್ಷ್ಮಿ 74,000 ಹಾಗೂ ಗೃಹಜ್ಯೋತಿ ಯೋಜನೆಯಡಿ 71,000 ಫಲಾನುಭವಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಯುವ ನಿಧಿ ಯೋಜನೆಗೆ ಹೆಚ್ಚಿನ ಫಲಾನುಭವಿಗಳು ಹೆಸರು ನೋಂದಾಯಿಸಿಕೊಳ್ಳಿ ಎಂದರು.

    ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೆಚ್ಚು ಅಪಘಾತ ಮತ್ತು ಸಾವು ಉಂಟಾಗುತ್ತಿತ್ತು, ಇದನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಹಲವಾರು ಸಭೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ಜವಾಬ್ದಾರಿ ವಹಿಸಿದ್ದರಿಂದ ಅಪಘಾತ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಆರ್ಥಿಕ ತಜ್ಞರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16 ರಂದು 15ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಬಜೆಟ್ ರೈತ ಹಾಗೂ ಜನಪರವಾಗಿರುವ ಜತೆಗೆ ಮಂಡ್ಯಕ್ಕೆ ದೊಡ್ಡ ಕೊಡುಗೆ ಸಿಗಲಿದೆ ಎಂಬ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

    ರಾಜ್ಯದ 223 ತಾಲೂಕುಗಳು ಭೀಕರ ಬರಗಾಲ ಎದುರಿಸುತ್ತಿದೆ. 5 ತಿಂಗಳ ಹಿಂದೆ ಕೇಂದ್ರಕ್ಕೆ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು ಹಾಗೂ ದೆಹಲಿ ಜಂತರ್ ಮಂತರ್‌ನಲ್ಲಿ ಹೋರಾಟ ಮಾಡಿದರೂ ಎಂಡಿಆರ್‌ಎಫ್ ಅಡಿಯಲ್ಲಿ ಪರಿಹಾರ ನೀಡಲು ಕೇಂದ್ರ ಸರ್ಕಾರ ವಿಫಲವಾಗಿದ್ದು, ಇದು ಪ್ರಜಾಪ್ರಭುತ್ವ ದುರಂತ. ತೆರಿಗೆ ಪಾವತಿ ಮಾಡುವಲ್ಲಿ ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ನಮ್ಮ ತೆರಿಗೆ ಹಣ ನೀಡೋಕು ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

    ಶಾಸಕ ಕೆ.ಎಂ.ಉದಯ್ ಮಾತನಾಡಿ, ತಾಲೂಕಿನ ಅಭಿವೃದ್ಧಿ ಕಾರ್ಯಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ 275 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದು, ಬಹಳ ಚುರುಕಿನಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಸಣ್ಣ ನೀರಾವರಿ ಹಾಗೂ ವಿವಿಧ ನೀರಾವರಿ ಇಲಾಖೆಗಳು ಸೇರಿ 200 ಕೋಟಿ ರೂ. ತಾಲೂಕಿಗೆ ಬಿಡುಗಡೆಯಾಗಿದೆ ಎಂದು ತಿಳಿಸಿದರು.

    ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ದೇಶದ ಇತಿಹಾಸದಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಮನೆ ಮನೆಗೆ ತಲುಪಿಸಿದ ಕೀರ್ತಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಹಿಳೆಯರ ಹೆಸರಿನಲ್ಲಿ ಯೋಜನೆಗಳನ್ನು ರೂಪಿಸಿರುವುದು ವಿಶೇಷವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಶಾಸಕರಾದ ಪಿ.ರವಿಕುಮಾರ್ ಗಣಿಗ, ಪಿ.ಎಂ.ನರೇಂದ್ರಸ್ವಾಮಿ, ಎಂಎಲ್ಸಿ ಮರಿತಿಬ್ಬೇಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಪಂ ಸಿಇಒ ಶೇಕ್ ತನ್ವಿರ್ ಆಸಿಫ್, ಉಪ ವಿಭಾಗಾಧಿಕಾರಿ ಎಂ.ಶಿವಾನಂದ, ತಾಲೂಕು ಉಸ್ತುವಾರಿ ಅಧಿಕಾರಿ ಬಿ.ಕೆ.ಮಮತಾ, ತಹಸೀಲ್ದಾರ್ ಕೆ.ಎಸ್.ಸೋಮಶೇಖರ್, ತಾಪಂ ಇಒ ಎಲ್.ಸಂದೀಪ್, ಬಿಇಒ ಸಿ.ಎಚ್.ಕಾಳೀರಯ್ಯ, ತಾಲೂಕು ಮಟ್ಟದ ಅಧಿಕಾರಿಗಳಾದ ಕೆ.ಎಂ.ರೇಖಾ, ನಾರಾಯಣ್, ಪ್ರಕಾಶ್‌ಕೊರ್ಜಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts