More

    102ನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ: ಐವರಿಂದ ಉಪವಾಸ ಸತ್ಯಾಗ್ರಹ ಆರಂಭ

    ಮಂಡ್ಯ: ಪ್ರತಿ ಟನ್ ಕಬ್ಬಿಗೆ 4,500 ರೂ ಹಾಗೂ ಪ್ರತಿ ಲೀಟರ್ ಹಾಲಿಗೆ 40 ರೂ ನಿಗದಿ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಸುತ್ತಿರುವ ಬುಧವಾರ 101ನೇ ದಿನ ಪೂರೈಸಿದೆ.
    2022 ನ.7ರಿಂದ ಧರಣಿ ನಡೆಯುತ್ತಿದೆ. ಈಗಾಗಲೇ ಹಲವು ಬಾರಿ ವಿಭಿನ್ನವಾಗಿ ಪ್ರತಿಭಟಿಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಆದರೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಐವರು ರೈತರು ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಗೂಳೂರು ರಾಮಕೃಷ್ಣ, ಮಲ್ಲನಾಯಕನ ಕಟ್ಟೆ ವಿಜಯಕುಮಾರ್, ಬೂತನ ಹೊಸೂರು ಸಂತೋಷ್, ತೂಬಿನಕೆರೆ ವಿನೋದ್‌ಬಾಬು ಮತ್ತು ಜಿ.ಮಲ್ಲಿಗೆರೆ ಅಣ್ಣಯ್ಯ ಅವರು ಉಪವಾಸ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಧರಣಿ ಹಿಂಪಡೆಯುವ ಪ್ರಶ್ನೆಯೇ ಇಲ್ಲವೆಂದು ಎಚ್ಚರಿಕೆ ನೀಡಿದ್ದಾರೆ.
    ಇನ್ನು 100ನೇ ದಿನದ ಅಂಗವಾಗಿ ಜಿಲ್ಲೆಯ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ರೈತ ಮಹಿಳೆಯರು ಧರಣಿಗೆ ಬೆಂಬಲ ಸೂಚಿಸಿ ರಾತ್ರಿ ಪ್ರತಿಭಟನಾ ಸ್ಥಳದಲ್ಲಿಯೇ ವಾಸ್ತವ್ಯ ಹೂಡಿದರು. ಮಾತ್ರವಲ್ಲದೆ ರೈತರನ್ನು ಕಡೆಗಣಿಸುತ್ತಿದ್ದಾರೆಂದು ರಾಜ್ಯ ಸರ್ಕಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.
    ಸರ್ಕಾರ ಕಬ್ಬಿಗೆ ಎಸ್‌ಎಪಿ ದರ ನಿಗದಿಪಡಿಸುವವರೆಗೂ ಅನಿರ್ದಿಷ್ಟಾವಧಿ ಚಳವಳಿ ಮುಂದುವರೆಯಲಿದೆ. ನಮ್ಮ ಚಳವಳಿಗೆ ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ ಹೋರಾಟ ಬೇರೆ ರೂಪ ಪಡೆಯುತ್ತವೆ. ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿಯೂ ಕಬ್ಬಿನ ದರದ ಬಗ್ಗೆ ಈವರೆಗೂ ಮಾತನಾಡಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಇವರಿಗೆ ಅರಿವಿಲ್ಲವೇ ಎಂದು ಹರಿಹಾಯ್ದ ಪ್ರತಿಭಟನಾಕಾರರು, ಜಿಲ್ಲೆಯಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸದೆ ತಮ್ಮ ವೈಯಕ್ತಿಕ ಪ್ರತಿಷ್ಟೆಗಾಗಿ ಒಬ್ಬರ ಮೇಲೆ ಇನ್ನೊಬ್ಬರು ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕಾರ್ಪೊರೇಟ್ ಉದ್ಯಮಿಗಳ ಸಾವಿರಾರು ಕೋಟಿ ರೂ ಸಾಲ ಮನ್ನಾ ಮಾಡುವ ಸರ್ಕಾರ ರೈತರ ನ್ಯಾಯಬದ್ಧ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಇದಲ್ಲದೆ ಬೆಳೆಗೆ ಬೆಲೆ ಕೇಳಿದ ರೈತರನ್ನು ಬಂಧಿಸುವ ಕೆಲಸ ಮಾಡುತ್ತಾರೆ. ಕಳೆದ ಹತ್ತು ವರ್ಷದಿಂದ ಕಬ್ಬಿನ ದರ ಹೆಚ್ಚಾಗಿಲ್ಲ. ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿದೆ. ಗೊಬ್ಬರದ ಬೆಲೆ ಮೂರು ಪಟ್ಟು ಹೆಚ್ಚಾಗಿದೆ. ಎಂಎಲ್ಎ ಮತ್ತು ಎಂಪಿಗಳು ಪಡೆಯುವ ಭತ್ಯೆಗಳು ಹೆಚ್ಚಿಸಿಕೊಂಡಿದ್ದಾರೆ. ಆದರೆ ಬೆಳೆದ ಬೆಳೆಗೆ ಬೆಂಬಲ ಬೆಲೆ ಮಾತ್ರ ಅಲ್ಲಿಯೇ ಇದೆ. ವ್ಯವಸಾಯಕ್ಕೆ ರೈತರು ಬಳಸುವ ವಸ್ತುಗಳ ಬೆಲೆ ಏರಿಕೆಯಾಗಿದೆ. ಬಂಡವಾಳಶಾಹಿಗಳ ಸಾಲ ಮನ್ನಾ ಮಾಡುವ ಸರ್ಕಾರ ದಿನ ರೈತರನ್ನು ಕಡೆಗಣಿಸಿರುವುದು ಬೇಸರದ ಸಂಗತಿ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts