

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಸೇನೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಈ ಕುರಿತು ಮಾತನಾಡಿದ ಸೇನೆಯ ಹಿರಿಯ ಅಧಿಕಾರಿಯೊಬ್ಬರು, ಅನಂತನಾಗ್ ಜಿಲ್ಲೆಯ ಶಾಂಗಸ್ನ ಲಾರ್ನೂ ಅರಣ್ಯ ಪ್ರದೇಶದಲ್ಲಿ ಶನಿವಾರ ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಗಿದ ನಂತರ ಹತರಾದ ಉಗ್ರರ ನಿಖರ ಗುರುತು ಪತ್ತೆಯಾಗಲಿದೆ ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ, ಜಮ್ಮು-ಕಾಶ್ಮೀರದ ಶ್ರೀನಗರದ ಭಾಗದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಎನ್ಕೌಂಟರ್ ಮುಂದುವರೆದಿದೆ. ಶ್ರೀನಗರದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಶ್ರೀನಗರ ನಗರದ ಖನ್ಯಾರ್ ಪ್ರದೇಶದಲ್ಲಿ ಸಿಎಎಸ್ಒ (ಕಾರ್ಡನ್ ಮತ್ತು ಸರ್ಚ್ ಆಪರೇಷನ್) ನಡೆಸುತ್ತಿರುವಾಗಿ ಗುಂಡಿನ ಚಕಮಕಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.