20 ಸರ್ಕಾರಿ ಶಾಲೇಲಿ ಆಂಗ್ಲ ಮಾಧ್ಯಮ ಬೋಧನೆ

ಚಿಕ್ಕಬಳ್ಳಾಪುರ: ಪಾಲಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಲು ಮುಗಿಬೀಳುತ್ತಿರುವುದರ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲೇ ಆಂಗ್ಲ ಮಾಧ್ಯಮ ಬೋಧನೆಗೆ ಮುಂದಾಗಿದೆ.

2019-20ನೇ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಸರ್ಕಾರಿ 20 ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ಅನುಮತಿ ನೀಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ಮಾಹಿತಿ ನೀಡಿದ್ದಾರೆ.

ಬಹುತೇಕ ಪಾಲಕರು ಉಜ್ವಲ ಭವಿಷ್ಯದ ಲೆಕ್ಕಾಚಾರದಲ್ಲಿ ಮಕ್ಕಳನ್ನು ಆಂಗ್ಲ ಮಾಧ್ಯಮದಲ್ಲಿ ಓದಿಸಲು ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಖಾಸಗಿ ಶಾಲೆಗಳಲ್ಲಿ ದುಬಾರಿ ಡೊನೇಷನ್ ಪಾವತಿಸುವಲ್ಲೂ ಹಿಂದೆ ಮುಂದೆ ಯೋಚಿಸುತ್ತಿಲ್ಲ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಹಲವೆಡೆ ನಿಗದಿತ ಸಂಖ್ಯೆಯಲ್ಲಿ ಮಕ್ಕಳು ಬಾರದ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಬೇಕಾದ ದುಸ್ಥಿತಿ ಬಂದಿದೆ. ಮತ್ತೊಂದೆಡೆ ಬಡ ಮಕ್ಕಳು ಮಾತ್ರ ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮ ಮತ್ತು ಶ್ರೀಮಂತ ವರ್ಗದ ಮಕ್ಕಳು ಖಾಸಗಿ ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಾತಾವರಣ ನಿರ್ವಣವಾಗಿರುವುದಕ್ಕೆ ಅಸಮಾಧಾನ ವ್ಯಕ್ತವಾಗುತ್ತಲೇ ಇದೆ. ಇದರ ನಡುವೆ ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ಬೋಧನೆಯ ಘೊಷಣೆ ಮಾಡಿದ್ದು, ಇದರ ಭಾಗವಾಗಿ ಜಿಲ್ಲೆಯಲ್ಲೂ 20 ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇಲ್ಲಿ ಒಂದನೇ ತರಗತಿಯಿಂದ ಮಕ್ಕಳನ್ನು ದಾಖಲಿಸಿಕೊಳ್ಳಲಿದ್ದು, ಶಿಕ್ಷಕರಿಗೆ ಆಂಗ್ಲ ಮಾಧ್ಯಮ ಬೋಧನೆಯ ತರಬೇತಿಯನ್ನೂ ನೀಡಿ ಸಜ್ಜುಗೊಳಿಸಲಾಗಿದೆ.

ಆಂಗ್ಲ ಮಾಧ್ಯಮದ ಸರ್ಕಾರಿ ಶಾಲೆಗಳು: ಚಿಂತಾಮಣಿ: ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆ (ಕೆನರಾ ಬ್ಯಾಂಕ್ ಸಮೀಪ), ವೆಂಕಟಗಿರಿಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಟ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೈವಾರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಬಾಗೇಪಲ್ಲಿ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾರ್ಗಾನುಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಶಿಡ್ಲಘಟ್ಟ: ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆ, ದೊಡ್ಡತೇಕಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಶೆಟ್ಟಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಾದಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಗೌರಿಬಿದನೂರು: ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಣಗಾನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, ಡಿಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹುದುಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಗುಡಿಬಂಡೆ: ಸರ್ಕಾರಿ ಬಾಲಕರು ಮತ್ತು ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ.