

ಮಂಗಳೂರು: ತೊಕೊಟ್ಟಿನ ಲಾಡ್ಜ್‌ವೊಂದರಲ್ಲಿ ಬಾಲಕಿಯನ್ನು ಅತ್ಯಾಚಾರವೆಸಗಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೊಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಹುಬ್ಬಳ್ಳಿ ನವನಗರ ಅಮರಗೋಳ್ ಬಸವ ಕಾಲನಿಯ ವಿವೇಕ್ ಅಂಬಿಗೇರ (20) ಶಿಕ್ಷೆಗೊಳಗಾದ ಅಪರಾಧಿ. ಆತ 2023ರಲ್ಲಿ ಬಾಲಕಿಯನ್ನು ತೊಕೊಟ್ಟಿನ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು. ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾಗಿದ್ದ ಶಾಂತಿನಾಥ ಜೆ.ವಣ್ಣೂರ ತನಿಖೆ ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಅಭಿಯೋಜನ ಪರ 15 ಸಾಕ್ಷಿದಾರರನ್ನು ವಿಚಾರಿಸಲಾಗಿದ್ದು ಪ್ರಕರಣದ ಸಾಕ್ಷೃ, ದಾಖಲೆಗಳು ಮತ್ತು ಪೂರಕ ಸಾಕ್ಷೃವನ್ನು ಹಾಗೂ ವಾದ ವಿವಾದವನ್ನು ಆಲಿಸಿದ ನ್ಯಾಯಾಧೀಶ ಮಾನು ಕೆ.ಎಸ್.ಅವರು, ಅತ್ಯಾಚಾರ ಎಸಗಿದ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಿದ್ದಾರೆ. ದಂಡದ ಹಣದಲ್ಲಿ 40 ಸಾವಿರ ರೂ.ಗಳನ್ನು ನೊಂದ ಬಾಲಕಿಗೆ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357(ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ಬಾಲಕಿಗೆ 1,60,000 ರೂ. ಪರಿಹಾರ ನೀಡುವಂತೆಯೂ ನಿರ್ದೇಶನ ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ವಾದಿಸಿದ್ದಾರೆ.