More

    3ನೇ ಅಲೆ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಿ

    ಬೆಳಗಾವಿ: ಕರೊನಾ ಸೋಂಕು ಪರೀಕ್ಷೆಗೆ ನೆರವಾಗುವ ಉದ್ದೇಶದಿಂದ ಚಿಕ್ಕೋಡಿಯಲ್ಲಿ ಶೀಘ್ರ ಆರ್‌ಟಿಪಿಸಿಆರ್ ಪ್ರಯೋಗಾಲಯ ಕಾಮಗಾರಿ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚಿಸಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರೊನಾ ಹಾಗೂ ನೆರೆ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಚಿಕ್ಕೋಡಿಯಲ್ಲಿ ಸಾಕಷ್ಟು ಸರ್ಕಾರಿ ಕಟ್ಟಡಗಳು ಲಭ್ಯ ವಿರುವುದರಿಂದ ಅಲ್ಲಿ ಆರ್‌ಟಿಪಿಸಿಆರ್ ಕೇಂದ್ರ ಆರಂಭಿಸಬೇಕು. ಬಿಮ್ಸ್ ಪ್ರಯೋಗಾಲಯ ಮಾದರಿಯಲ್ಲಿ ಚಿಕ್ಕೋಡಿಯಲ್ಲಿ 2 ದಿನದಲ್ಲಿ ಪ್ರಯೋಗಾಲಯ ಸಿದ್ಧಪಡಿಸಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಮಕ್ಕಳ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಿ: ಸಂಭವನೀಯ ಮೂರನೇ ಅಲೆಯ ವೇಳೆ ಮಕ್ಕಳಿಗೆ ಸೋಂಕು ತಗುಲಬಹುದು ಎಂಬ ವರದಿಗಳು ಇರುವುದರಿಂದ ಸೋಂಕು ನಿಯಂತ್ರಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಬಿಮ್ಸ್ ಸೇರಿದಂತೆ ಎಲ್ಲ ತಾಲೂಕುಗಳಲ್ಲಿ ಸೂಕ್ತ ವೈದ್ಯಕೀಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಪ್ರವಾಹ ನಿರ್ವಹಣೆಗೆ ಕ್ರಮ: ಹವಾಮಾನ ವರದಿ ಪ್ರಕಾರ ಮಳೆಯಾಗುವ ಸಾಧ್ಯತೆಗಳಿವೆ. ಆದರೆ ಮಹಾರಾಷ್ಟ್ರದ ಜಲಾಶಯಗಳಲ್ಲಿ ಶೇ.30ನೀರು ಸಂಗ್ರಹ ಇರುವುದರಿಂದ ಸದ್ಯಕ್ಕೆ ಪ್ರವಾಹ ಸ್ಥಿತಿ ಉದ್ಭವಿಸುವುದಿಲ್ಲ. ನೆರೆಯ ಮಹಾರಾಷ್ಟ್ರ ಸೇರಿದಂತೆ ಎಲ್ಲ ಜಲಾಶಯ ಮಟ್ಟ ಹಾಗೂ ಮಳೆಯ ಪ್ರಮಾಣದ ಮೇಲೆ ನಿಗಾ ವಹಿಸಬೇಕು ಎಂದರು. ಕೃಷಿ ಕಾರ್ಯ ಆರಂಭವಾದ ಕಾರಣ ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ ಹಾಗೂ ಗೊಬ್ಬರ ವಿತರಣೆಯಾಗಬೇಕು. ಹೆಚ್ಚಿನ ದರಕ್ಕೆ ಬೀಜ ಮಾರಾಟವಾಗದಂತೆ ಎಚ್ಚರಿಕೆ ವಹಿಸಬೇಕು.

    ಜಾನುವಾರುಗಳಿಗೆ ನಿಗದಿತ ವೇಳೆಯಲ್ಲಿ ಲಸಿಕೆ ವಿತರಿಸಬೇಕು. ಮೇವಿನ ಕೊರತೆಯಾದರೆ ಖರೀದಿಗೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪ್ರಾದೇಶಿಕ ಆಯುಕ್ತರು ಹಾಗೂ ಬಿಮ್ಸ್ ಆಡಳಿತ ಮೇಲುಸ್ತುವಾರಿ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್, ಎಸ್‌ಪಿ ಲಕ್ಷ್ಮಣ ನಿಂಬರಗಿ, ಅರವಿಂದ ಕಣಗಲಿ, ಡಾ.ಎಸ್.ವಿ.ಮುನ್ಯಾಳ, ಶಿವನಗೌಡ ಪಾಟೀಲ ಇತರರು ಇದ್ದರು.

    5 ಕೋಟಿ ರೂಪಾಯಿ ಅನುದಾನ: ಲಾಕ್‌ಡೌನ್‌ನಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿವಿಧ ವರ್ಗದ ಜನರಿಗೆ ರಾಜ್ಯ ಸರ್ಕಾರ 1,750 ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದೆ. ಬೆಳಗಾವಿ ಜಿಲ್ಲೆಯ 27,350 ರೈತರಿಗೆ 11 ಕೋಟಿ ರೂ. ಪರಿಹಾರ ಸಿಗಲಿದೆ. 7 ಸಾವಿರ ರೈತರಿಗೆ 5 ಕೋಟಿ ರೂ. ಪರಿಹಾರ ನೀಡಲು ಅನುದಾನ ಬಿಡುಗಡೆಯಾಗಿದೆ. ಅಸಂಘಟಿತ ಕಾರ್ಮಿಕರಿಗೆ ಸ್ಥಳೀಯ ಮಟ್ಟದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಎಲ್ಲ ವರ್ಗಗಳ ಜನರಿಗೆ ಕೂಡಲೇ ಪರಿಹಾರಧನ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts