

ಹುಬ್ಬಳ್ಳಿ: ಓಮ್ನಿ ಕಾರು, ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಹೆಬಸೂರ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಕೊಪ್ಪಳ ತಾಲ್ಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ಸಾಬ್ (60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಪಾರ್ಶವಾಯುಗೆ ಔಷಧಿ ತರಲೆಂದು ಜಾಫರ್ಸಾಬ್ ಕುಟುಂಬದವರ ಜೊತೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಹಳಗಾ ಗ್ರಾಮದಲ್ಲಿರುವ ಸೇಂಟ್ ಮೇರಿ ಆಸ್ಪತ್ರೆಗೆ ಹೋಗಿದ್ದರು. ಔಷಧಿ ಪಡೆದು ಊರಿಗೆ ವಾಪಸ್ ಆಗುತ್ತಿದ್ದ ವೇಳೆ ರಾತ್ರಿ 10 ಗಂಟೆ ಸುಮಾರಿಗೆ ಹೆಬಸೂರ ಗ್ರಾಮದ ಬಳಿಕ ಕಾರು ಹಾಗೂ ಲಾರಿ ನಡುವೆ ಅಪಘಾತದ ಸಂಭವಿಸಿದೆ.
ಅಪಘಾತ ಸಂಭವಿಸಿದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಡಿ ನೀಡಿದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.