ಪ್ರಧಾನಿ ಮೋದಿ ಸಭೆಗೆ ಜನರನ್ನು ಹೊತ್ತೊಯ್ಯುತ್ತಿದ್ದ ಬಸ್​​ಗೆ ಅಪಘಾತ; ಮೂರು ಮಂದಿ ಸಾವು

accident
Published on

ಛತ್ತೀಸ್​ಗಢ: ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಗೆ ತೆರಳುತ್ತಿದ್ದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ಬಸ್ 47 ಬಿಜೆಪಿ ಕಾರ್ಯಕರ್ತರನ್ನು ಹೊತ್ತು ರಾಯ್‌ಪುರಕ್ಕೆ ಹೋಗುತ್ತಿತ್ತು. ಬಿಲಾಸ್‌ಪುರದ ರತನ್‌ಪುರ ಬಳಿ ನಿಂತಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್‌ನ ಮುಂಭಾಗ ಹಾರಿ ಹೋಗಿದೆ. ಬಸ್ ಚಾಲಕ ನಿದ್ರಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಬೆಳಗಿನ ಜಾವ 5 ಗಂಟೆಗೆ ಈ ಅವಘಡ ಸಂಭವಿಸಿದೆ. ದಾರಿಹೋಕರು 112 ನಂಬರ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಹಾಗೂ ಆಸ್ಪತ್ರೆ ತಂಡ ಸ್ಥಳಕ್ಕೆ ಆಗಮಿಸಿದೆ. ಇದಾದ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್, ''ಅಪಘಾತದ ಸುದ್ದಿ ತಿಳಿದಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬ ಸದಸ್ಯರಿಗೆ ಧೈರ್ಯ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ನಾವೆಲ್ಲರೂ ಹಾರೈಸುತ್ತೇವೆ. ಮೃತರ ಕುಟುಂಬ ಸದಸ್ಯರಿಗೆ ತಲಾ 4 ಲಕ್ಷ ರೂ.ಗಳ ನೆರವು ಘೋಷಿಸುತ್ತೇನೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಅವರ ಕುಟುಂಬದೊಂದಿಗೆ ನಿಲ್ಲುತ್ತೇವೆ'' ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net