More

    30ರಂದು ನಮ್ಮೆಲ್ಲರ ಹೋರಾಟದ ನಡಿಗೆ ಹಾಸನದ ಕಡೆಗೆ ಬೃಹತ್ ಪ್ರತಿಭಟನೆ

    ಹಾಸನ: ಅಶ್ಲೀಲ ವಿಡಿಯೋ ಮತ್ತು ಪೆನ್ ಡ್ರೈವ್ ಹಂಚಿಕೆ ಸಂಬಂಧ ತಪ್ಪಿತಸ್ಥರ ವಿರುದ್ಧ ನಿದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಜನಪರ ಚಳವಳಿ ಒಕ್ಕೂಟದ ವತಿಯಿಂದ ಮೆ.30ರಂದು ‘ನಮ್ಮೆಲ್ಲರ ಹೋರಾಟದ ನಡಿಗೆ ಹಾಸನದ ಕಡೆಗೆ’ ಎಂಬ ಬೃಹತ್ ಪ್ರತಿಭಟನೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಎಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು.
    ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಲೆಮರೆಸಿಕೊಂಡು ಹೊರದೇಶದಲ್ಲಿ ನೆಲೆಸಿದ್ದು ಆತನನ್ನು ಹಿಡಿಯುವಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಬೃಹತ್ ಬಹಿರಂಗ ಸಭೆ ಮತ್ತು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಈ ಪ್ರತಿಭಟನೆಗೆ ರಾಜ್ಯದ ನಾನಾ ಜಿಲ್ಲೆಗಳಿಂದ 10ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಈ ಪ್ರತಿಭಟನೆಯನ್ನು ಹತ್ತಿಕ್ಕಲು ಕುಮಾರಸ್ವಾಮಿ ಮತ್ತು ಜೆಡಿಎಸ್‌ನವರು ಯತ್ನಿಸುತ್ತಿದ್ದಾರೆ. ಇವರಿಗೆ ನಿಜವಾಗಿಯೂ ನೈತಿಕತೆ ಇದ್ದರೆ ಮತ್ತು ಮಹಿಳೆಯರ ಬಗ್ಗೆ ಗೌರವ ಇದ್ದರೆ ಈ ಪ್ರತಿಭಟನೆಗೆ ಬೆಂಬಲಿಸಬೇಕು. ಜಿಲ್ಲೆಯ ಮಾನವನ್ನ ಹರಾಜು ಮಾಡಿರುವವರನ್ನು ಬಂಧಿಸಬೇಕು ಮತ್ತು ಸಂತ್ರಸ್ತೆಯರಿಗೆ ನ್ಯಾಯ ದೊರಕಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಹೋರಾಟ ಮಾಡಲಾಗುತ್ತಿದೆ. ನಾವು ಯಾವುದೇ ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ನಡೆಸುತ್ತಿಲ್ಲ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು ಈ ರೀತಿ ಹೇಳಿಕೆ ನೀಡುತ್ತಿರುವುದು ಖಂಡನೀಯ. ತಮ್ಮ ಕುಟುಂಬದವರನ್ನು ರಕ್ಷಣೆ ಮಾಡಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
    ಪ್ರಗತಿಪರ ಚಿಂತಕ ಆರ್.ಪಿ. ವೆಂಕಟೇಶ್ ಮೂರ್ತಿ ಮಾತನಾಡಿ, ದೇವೇಗೌಡರ ಈಗ ತಮ್ಮ ಮೊಮ್ಮಗನನ್ನು ಬರುವಂತೆ ಹೇಳುತ್ತಿದ್ದಾರೆ. ಈ ಕೆಲಸವನ್ನು ಈ ಹಿಂದೆಯೇ ಮಾಡಬೇಕಿತ್ತು. ಅಲ್ಲದೆ ಒಂದು ವೇಳೆ ಅವರ ಮಾತಿಗೆ ಬೆಲೆ ಕೊಟ್ಟು ಪ್ರಜ್ವಲ್ ಬರದಿದ್ದರೆ ಸ್ವತಃ ದೇವೇಗೌಡರೇ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಆತನನ್ನು ಹಿಡಿಯಲು ಸಹಕರಿಸಬೇಕು ಎಂದು ಒತ್ತಾಯಿಸಿದರು.
    ಬೃಹತ್ ಪ್ರತಿಭಟನೆಗೆ ಬರುವವರನ್ನು ತಡೆಯಲು ಮತ್ತು ಬೆದರಿಕೆ ಹಾಕಲು ಕುಮಾರಸ್ವಾಮಿ ಅವರು ಯತ್ನಿಸುತ್ತಿದ್ದಾರೆ. ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ನಾವು ಯಾರನ್ನು ಕೂಡ ಪ್ರತಿಭಟನೆಗೆ ಬನ್ನಿ ಎಂದು ಬಲವಂತ ಮಾಡಿಲ್ಲ. ಎಲ್ಲರೂ ತಮ್ಮ ತಮ್ಮ ಜವಾಬ್ದಾರಿ ಅರಿತು ಈ ಪ್ರತಿಭಟನೆಗೆ ಆಗಮಿಸುತ್ತಿದ್ದಾರೆ. ಇದರಿಂದ ಏನಾದರೂ ಅನಾಹುತಗಳು ನಡೆದರೆ ಅದಕ್ಕೆ ಕುಮಾರಸ್ವಾಮಿ ಅವರೇ ಹೊಣೆಗಾರರಾಗಿರುತ್ತಾರೆ ಎಂದು ಎಚ್ಚರಿಸಿದರು.
    ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡರಾದ ಎಚ್.ಕೆ. ಸಂದೇಶ್, ರಾಜಶೇಖರ್, ಸೋಮಶೇಖರ್, ವಿಜಯ್ ಕುಮಾರ್, ಅಬ್ದುಲ್ ಸಮ್ಮದ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts