370ನೇ ವಿಧಿ ಶೀಘ್ರ ರದ್ದು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂವಿಧಾನದ 370ನೇ ವಿಧಿ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದ್ದು, ಸದ್ಯದಲ್ಲೇ ಸಾಕಾರವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನದ ನಿಮಿತ್ತ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಅಖಂಡತೆಗಾಗಿ ಶ್ರಮಿಸಿದ ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಕಾಂಗ್ರೆಸ್ ಮಾಡಿದ ಅನ್ಯಾಯವನ್ನು ದೇಶದ ಜನರು ಎಂದಿಗೂ ಕ್ಷಮಿ ಸಲು ಸಾಧ್ಯವಿಲ್ಲ. ಅಂಬೇಡ್ಕರ್ ಅವರಿಗೆ ಮೋಸ ಮಾಡಿದಂತೆ ಮುಖರ್ಜಿಗೂ ಕಾಂಗ್ರೆಸ್ ಅನ್ಯಾಯ ಮಾಡಿತು. ಅವರ ನಿಗೂಢ ಸಾವಿನ ಬಗ್ಗೆ ತನಿಖೆ ನಡೆಸಲಿಲ್ಲ. ಮುಖರ್ಜಿ ಅವರ ಬಲಿದಾನ, ಪರಿಶ್ರಮದ ಕಾರಣ ದೇಶದಲ್ಲಿ ಬಿಜೆಪಿ ಇಂದು ಅತಿ ಹೆಚ್ಚು ಸ್ಥಾನಗಳನ್ನು ಪಡೆದು ಎರಡನೇ ಬಾರಿ ಅಧಿಕಾರಕ್ಕೆ ಬಂದಿದೆ. ಸ್ವಚ್ಛ, ದಕ್ಷ ಆಡಳಿತ ನೀಡುವುದೇ ಅವರಿಗೆ ನಾವು ನೀಡುವ ನಿಜವಾದ ಶ್ರದ್ಧಾಂಜಲಿ ಎಂದರು.

ಹಿರಿಯ ಮುಖಂಡ ಗೋವಿಂದ ಕಾರಜೋಳ, ವಿಧಾನಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ, ರುದ್ರೇಗೌಡ, ಮಲ್ಲೇಶ್ವರ ಮಂಡಲ ಬಿಜೆಪಿ ಅಧ್ಯಕ್ಷ ಕೇಶವ ಐತಾಳ, ಕಾರ್ಯಾಲಯ ಕಾರ್ಯದರ್ಶಿ ಗಣೇಶ ಯಾಜಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *