

ಚಂಡೀಗಢ: ಇಟ್ಟಿಗೆ (Brick) ಗೂಡು ಕುಸಿದ ಪರಿಣಾಮ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಹರಿಯಾಣದ ಹಿಸಾರ್ ಜಿಲ್ಲೆಯ ಬುಡಾನಾ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರ್ಘಟನೆಯಲ್ಲಿ 3 ತಿಂಗಳಿಂದ 9 ವರ್ಷದೊಳಗಿನ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಮೃತರನ್ನು ನಿಶಾ (03 ತಿಂಗಳು), ನಂದಿನಿ (05), ಸುರೇಶ್, ವಿವೇಕ್ (09) ಎಂದು ಗುರುತಿಸಲಾಗಿದೆ. ಘಟನೆ ನಡೆದಾಗ ಸ್ಥಳದಲ್ಲೆ 25ಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಗಾಯಗೊಂಡಿರುವ ಮೂವರು ಮಕ್ಕಳ ಸ್ಥಿತಿ ಚಿಂತಾಜನಕ ಎಂದು ಹೇಳಲಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ನಾರ್ನಾಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.