

ಬೆಂಗಳೂರು: ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ(Reservation is not based on religion. It is based on the foundation of social justice), ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ(H D Kumaraswamy) ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
ಮುಸ್ಲಿಮರಿಗೆ ಕಾಂಗ್ರೆಸ್ ಸರ್ಕಾರ ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಸಮಸ್ಯೆ ಇಲ್ಲ. ಗೊಂದಲವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್‌ಡಿಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರ್ಕಾರದ ವಿರುದ್ಧ ಹೋರಾಟದ ರೂಪುರೇಷೆ ತಯಾರಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಜೆಡಿಎಸ್-ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ, ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.