More

    5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ

    ಚಿತ್ರದುರ್ಗ: ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6 ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೆ ಲಸಿಕೆ ಹಾಕಿಸುವಂತೆ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ್ ಮನವಿ ಮಾಡಿದರು.
    ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಗುರುವಾರ, ನಗರ ಆರೋಗ್ಯ ಕೇಂದ್ರಗಳ ಮೇಲ್ವಿಚಾರಕರಿಗೆ ಏರ್ಪಡಿಸಿದ್ದ ತರಬೇತಿ ಕಾರ‌್ಯಾಗಾರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 1213 ತಂಡಗಳನ್ನು ರಚಿಸಲಾಗಿದೆ. ಕಳೆದ ಬಾರಿಯ ಲಸಿಕಾ ಕೇಂದ್ರಗಳಲ್ಲಿ ಈ ಬಾರಿಯೂ ಲಸಿಕೆ ಹಾಕಲಾಗುವುದು. ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ 259 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಪುನಃ ಲಸಿಕೆ ಹಾಕಿಸಲು 1,35,105 ಅರ್ಹ ಮಕ್ಕಳನ್ನು ಗುರುತಿಸಲಾಗಿದೆ ಎಂದರು.
    ಸಾರ್ವಜನಿಕರು, ಸರ್ಕಾರೇತರ ಸಂಘ ಸಂಸ್ಥೆಗಳು, ಧಾರ್ಮಿಕ ಮುಖಂಡರು, ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯೊಂದಿಗೆ ಸಹಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
    ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಗಿರೀಶ್ ಮಾತನಾಡಿ, ನಗರ ಪ್ರದೇಶಗಳಲ್ಲಿ ಲಸಿಕೆ ನೀಡುವಾಗ ಸೂಕ್ತ ಪರಿಶೀಲನೆ ಅಗತ್ಯ. ಅಲ್ಲಲ್ಲಿ ವಲಸೆ ಕಾರ್ಮಿಕರ ಬಿಡಾರಗಳಿವೆ. ಕಟ್ಟಡ ಕಾರ್ಮಿಕರ ಮಕ್ಕಳಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಗರೂಕರಾಗಿ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿಸಬೇಕಿದೆ ಎಂದರು.
    ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಶನಿವಾರ ಬೆಳಗ್ಗೆ ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
    ವ್ಯವಸ್ಥಾಪಕ ಮೊಹಮ್ಮದ್‌ಅಲಿ ಹಬೀಬ್, ಆಶಾ ಬೋಧಕಿ ಗುರುಲಿಂಗಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಗಂಗಾಧರ್, ರಂಗಾರೆಡ್ಡಿ, ಪ್ರವೀಣ್, ಗೋಪಾಲಕೃಷ್ಣ, ಗುರುಮೂರ್ತಿ, ಶ್ರೀನಿವಾಸ್‌ಮಳಲಿ, ತಿಪ್ಪೇಸ್ವಾಮಿ, ಪ್ರಸನ್ನ ಮತ್ತಿತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts