ಲಾರಿ-ಬೈಕ್​ ಡಿಕ್ಕಿ; ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಸಾವು

Accident
Published on

ಕಲಬುರಗಿ: ಲಾರಿ ಹಾಗೂ ಬೈಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲ್​ಪುರ ತಾಲ್ಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ನಡೆದಿದೆ.

ಮೃತ ಐವರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಕಳೆದ ಹಲವು ವರ್ಷಗಳಿಂದ ಕೆಲಸದ ನಿಮಿತ್ತ ಅಫಜಲ್​ಪುರದಲ್ಲಿ ವಾಸವಿದ್ದರು ಎಂದು ವರದಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಅಫಜಲ್​ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Kalaburgi Accident

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮಹಾರಾಷ್ಟ್ರದ ದುಧನಿ ಕಡೆಯಿಂದ ಅಫಜಲಪುರದ ಕಡೆಗೆ ದಂಪತಿ, ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಇದೇ ವೇಳೆ, ಅಫಜಲಪುರದಿಂದ ದುಧನಿಯತ್ತ ತೆರಳುತ್ತಿದ್ದ ಲಾರಿಯೊಂದು ಎದುರಿನಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ ಸ್ಥಳದಲ್ಲಿ ಮೃತರ ಆಧಾರ್ ಕಾರ್ಡ್‌ ಸಿಕ್ಕಿದೆ. ಅದರಲ್ಲಿ ಅವರೆಲ್ಲರ ವಿಳಾಸ ಬೆಂಗಳೂರು ಎಂದು ಉಲ್ಲೇಖಿಸಲಾಗಿದೆ. ಅಪಘಾತದ ಬಳಿಕ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು, ಅತನಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net