

ನವದೆಹಲಿ: ಪ್ರಪಂಚದಾದ್ಯಂತ ಕರೊನಾ ಭೀತಿ ಹೆಚ್ಚಿರುವ ಹಿನ್ನೆಲೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ದೇಶದಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ 160ರ ಗಡಿ ದಾಟಿದ್ದು, ಅನೇಕ ರಾಜ್ಯಗಳಲ್ಲಿ ಅರೆ ಬಂದ್ ಘೋಷಿಸಲಾಗಿದೆ. ಇದೀಗ ಕೇಂದ್ರ ಸರ್ಕಾರದ ಶೇ.50 ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ಸರ್ಕಾರದ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಸಿಬ್ಬಂದಿಗಳು ಮಾರ್ಚ್ 31ರವರೆಗೆ ಮನೆಯಿಂದಲೇ ಕೆಲಸ ಮಾಡಿ ಎಂದು ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದುಕೊರತೆ ಸಚಿವಾಲಯ ಆದೇಶಿಸಿದೆ. ಅಗತ್ಯ/ತುರ್ತು ಸೇವೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಮತ್ತು ಕರೊನಾ ವೈರಸ್ ತಡೆಗಟ್ಟಲು ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ತಿಳಿಸಲಾಗಿದೆ.
ದೇಶದಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಕಾಣುತ್ತಿರುವ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಈಗಾಗಲೇ ಅರೆಬಂದ್ ಘೋಷಿಸಲಾಗಿದೆ. ಖಾಸಗಿ ಸಂಸ್ಥೆಗಳ ಸಿಬ್ಬಂದಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅನುವು ಮಾಡಿಕೊಡುವಂತೆ ತಿಳಿಸಲಾಗಿದೆ. ಮಾರ್ಚ್ 31ರವರೆಗೆ ಮಾಲ್ಗಳು, ಥಿಯೇಟರ್ಗಳು, ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. (ಏಜೆನ್ಸೀಸ್)