ಕೊಕಟನೂರ: ಅಥಣಿ ತಾಲೂಕಿನ ಅನಂತಪುರ ಗ್ರಾಮದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 60 ಕ್ವಿಂಟಾಲ್ ಅನ್ನಭಾಗ್ಯದ ಅಕ್ಕಿಯನ್ನು ಅಥಣಿ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಅನಂತಪುರದ ಕುಮಾರ ಸಂಗಪ್ಪ ಪಡಸಲಗಿ (32) ಎಂಬುವವರನ್ನು ಬಂಧಿಸಲಾಗಿದೆ. ಆಹಾರ ನಿರೀಕ್ಷಕ ಶರಣಪ್ಪ ಅಂಬರಪ್ಪ ಬಾಗೇವಾಡಿ ಎಂಬುವರು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಥಣಿ ಸಿಪಿಐ ಶಂಕರಗೌಡ ಬಸನಗೌಡರ, ಪಿಎಸ್‌ಐ ಕುಮಾರ ಹಾಡಕರ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.