More

    ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಿರಲಿ

    ಗದಗ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬವಾಗದಂತೆ ಅಧಿಕಾರಿಗಳು ಮುಂಜಾಗ್ರತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಹಮ್ಮಿಗಿ ಬ್ಯಾರೇಜಿನಲ್ಲಿ ಸಾಕಷ್ಟು ನೀರು ಸಂಗ್ರಹವಿದ್ದು, ಸದ್ಯ ನೀರು ಪೂರೈಕೆಗೆೆ ಯಾವುದೇ ಕೊರತೆ ಇಲ್ಲ. ಶಿರಹಟ್ಟಿ ಹಾಗೂ ಗಜೇಂದ್ರಗಡದಲ್ಲಿ ನೀರಿನ ಸಮಸ್ಯೆಯಾದಲ್ಲಿ ಬೋರ್​ವೆಲ್ ಮತ್ತು ಟ್ಯಾಂಕರ್ ಮೂಲಕ ನೀರಿನ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.

    ನಗರ ಪ್ರದೇಶಗಳಲ್ಲಿಯೂ ಸಹ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕಾಳಜಿ ವಹಿಸಿ ಕೆಲಸ ಮಾಡಬೇಕು. ಸಿಬ್ಬಂದಿಗಳ ವೇತನ ಪಾವತಿಯಲ್ಲಿ ಸಮಸ್ಯೆಗಳಿದ್ದರೆ ಅಧಿಕಾರಿಗಳು ಕೂಡಲೆ ತಮ್ಮ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಿದರು.

    ಶಿಸ್ತು ಕ್ರಮ ಖಚಿತ: ಕರೊನಾ ವೈರಸ್​ಗೆ ಸಂಬಂಧಿಸಿದಂತೆ ಹೆಚ್ಚಿನ ದರಕ್ಕೆ ಮಾಸ್ಕ್ ಮಾರಾಟ ಮಾಡುತ್ತಿರುವುದು ಕಂಡು ಬಂದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಜಿಲ್ಲೆಯ ತಾಂಡಾಗಳಲ್ಲಿ ಕರೊನಾ ಬರದಂತೆ ತಡೆಗಟ್ಟಲು ಆರೋಗ್ಯ ಇಲಾಖೆಯು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

    ಜಿಲ್ಲೆಯ ನೆರೆ ಪರಿಹಾರದಡಿ ಬಿಡುಗಡೆಯಾದ ಅನುದಾನದ ಸಮರ್ಪಕ ಬಳಕೆಗೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲೆಯಲ್ಲಿ 2,04,883 ಜಾನುವಾರುಗಳಿದ್ದು , ಇನ್ನೂ 23 ವಾರಗಳವರೆಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಇದೆ. ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಲಸಿಕಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸಭೆಗೆ ತಿಳಿಸಿದರು.

    ಜಿಲ್ಲೆಯಲ್ಲಿರುವ 30 ಕೆರೆಗಳಲ್ಲಿ ನೀರು ಲಭ್ಯವಿದ್ದು, ಬೇಸಿಗೆಯಲ್ಲಿ ಜಾನುವಾರುಗಳಿಗೆ ನೀರಿನ ಕೊರತೆ ಆಗುವುದಿಲ್ಲ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಭೆಗೆ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ ಎನ್., ಅಪರ ಜಿಲ್ಲಾಧಿಕಾರಿ ಸತೀಶಕುಮಾರ, ಜಿ.ಪಂ. ಸಿಇಒ ಡಾ. ಆನಂದ ಕೆ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಬಿ., ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts