More

    ಮೋದಿ ಪ್ರವಾಸದಿಂದ ಕಾಂಗ್ರೆಸ್ ಆತ್ಮವಿಶ್ವಾಸ ಕುಸಿತ

    ದಾವಣಗೆರೆ : ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಚ್ಚು ಪ್ರವಾಸ ಕೈಗೊಳ್ಳುತ್ತಿರುವುದರಿಂದ ಕಾಂಗ್ರೆಸ್ ಪಕ್ಷದವರ ಆತ್ಮವಿಶ್ವಾಸ ದಿನೇ ದಿನೆ ಕುಸಿಯುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
     ಏ. 28 ರಂದು ನಗರದಲ್ಲಿ ಮೋದಿ ಅವರ ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
     ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದರೂ ಕೂಡಾ ನರೇಂದ್ರ ಮೋದಿ ಅವರ ಜನಪ್ರಿಯತೆ ಮುಂದೆ ಕಂಗಾಲಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಜಾಹೀರಾತುಗಳು ಜಾಸ್ತಿಯಾಗುತ್ತಿವೆ ಎಂದು ತಿಳಿಸಿದರು.
     ಮೋದಿ ಏ. 28 ಮತ್ತು 29ರಂದು ರಾಜ್ಯದ 5 ಕಡೆಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. 28 ಎಂದು ಬೆಳಗ್ಗೆ 10ಕ್ಕೆ ಬೆಳಗಾವಿಯ ಸಭೆಯಲ್ಲಿ ಮಾತನಾಡುವರು. ಮಧ್ಯಾಹ್ನ 12 ಗಂಟೆಗೆ ಉತ್ತರ ಕನ್ನಡಕ್ಕೆ ತೆರಳಿ, 2 ಗಂಟೆಗೆ ದಾವಣಗೆರೆಗೆ ಆಗಮಿಸಲಿದ್ದಾರೆ. ಸಂಜೆ 4ಕ್ಕೆ ಹೊಸಪೇಟೆ, 29 ರಂದು ಬಾಗಲಕೋಟೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
     ಮೊದಲ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್ ಕನಸು ಕಾಣುತ್ತಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಕಲ್ಪನೆಗೂ ಮೀರಿದ ಪೂರಕ ವಾತಾವರಣವಿದೆ. ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ತುಮಕೂರು, ಚಿತ್ರದುರ್ಗ ಸೇರಿ ಎಲ್ಲ 14 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದರು.
     ಪಿತ್ರಾರ್ಜಿತ ಆಸ್ತಿ ತೆರಿಗೆ ಕುರಿತು ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅಲ್ಪಸಂಖ್ಯಾತರನ್ನು ಓಲೈಸುವ ರಾಜಕಾರಣದ ಮುಂದಿನ ಹಂತವಾಗಿ ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡರ ಮನಸ್ಸಿನಲ್ಲಿ ಇರುವುದನ್ನು ಸ್ಯಾಮ್ ಪಿತ್ರೋಡಾ ಮೂಲಕ ಹೇಳಿಸುತ್ತಿದ್ದಾರೆ ಎಂದು ಹೇಳಿದರು.
     ಈ ವಿಚಾರವಾಗಿ ಚರ್ಚೆಗಳು ನಡೆಯುತ್ತಿದ್ದು, ಮತದಾರರು ಇದನ್ನು ಗಮನಿಸುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಬೇಕು ಎನ್ನುವ ಪಿತೂರಿಯಿಂದ ಮುಂದಿನ ದಿನಗಳಲ್ಲಿ ಅರಾಜಕತೆ ಸೃಷ್ಟಿಯಾಗಬಹುದು. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಆದರೆ, ಅಲ್ಪಸಂಖ್ಯಾತರನ್ನು ಖುಷಿಪಡಿಸಲು ಕಾಂಗ್ರೆಸ್ ಇತರೆ ಹಿಂದುಳಿದ ವರ್ಗದವರಿಗೆ ಅನ್ಯಾಯ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
     ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನವರು ಗೆಲ್ಲುವ ಭ್ರಮೆಯಲ್ಲಿದ್ದು ಅವರಿಗೆ ನಿರಾಸೆ ಕಾದಿದೆ. ಮೋದಿ ಅವರು 5ನೇ ಬಾರಿಗೆ ದಾವಣಗೆರೆಗೆ ಆಗಮಿಸುತ್ತಿದ್ದು 2 ಲಕ್ಷ ಜನರು ಸ್ವಯಂ ಪ್ರೇರಿತರಾಗಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
     ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರಾಜಶೇಖರ್, ಮುಖಂಡರಾದ ದೇವರಮನಿ ಶಿವಕುಮಾರ್, ಅಜ್ಜಂಪುರ ಶೆಟ್ರು ಮೃತ್ಯುಂಜಯ, ಅನಿಲ್ ಕುಮಾರ್, ಧನಂಜಯ ಕಡ್ಲೆಬಾಳ್, ಪಿ.ಸಿ. ಶ್ರೀನಿವಾಸ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts