ಢಮರುಗ ಯಾರಿಗಾದ್ರೂ ಕಿರಿಕಿರಿ ಮಾಡಿದ್ಯಾ? ಎನ್ನುತ್ತಲೇ ಧ್ವನಿವರ್ಧಕ ವಿವಾದ ಇತ್ಯರ್ಥಕ್ಕೆ ಮಹತ್ವದ ಸಲಹೆ ಕೊಟ್ಟ ಎಚ್​ಡಿಕೆ

hdk
Published on

ಬೆಂಗಳೂರು: ಹಿಂದೂಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲಿಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಅಗತ್ಯಬಿದ್ದರೆ, ಶಬ್ದದ ಪ್ರಮಾಣವನ್ನು ವೈಜ್ಞಾನಿಕವಾಗಿ ಚಿಂತಿಸಿ ಕಡಿಮೆ ಮಾಡಲಿ. ಆ ಬಗ್ಗೆ ಮುಸ್ಲಿಂ ಧರ್ಮಗುರುಗಳೂ ಆಲೋಚನೆ ಮಾಡಲಿ ಎಂದು ಸಲಹೆ ನೀಡಿದ್ದಾರೆ.

ನಸುಕಿನಲ್ಲಿ ಸುಪ್ರಭಾತ- ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ. ದೇವಾಲಯಗಳಲ್ಲಿ ಮಹಾ ಮಂಗಳಾರತಿ ಸಂದರ್ಭಗಳಲ್ಲಿ ಢಮರುಗ, ಜಾಗಟೆ, ಘಂಟೆ ಇತ್ಯಾದಿಗಳನ್ನು ಭಾರಿಸುವ ಸಂಪ್ರದಾಯ ಇದ್ದೇ ಇದೆ. ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಮೋದಿ ಅವರ ಮೇಲ್ಪಂಕ್ತಿಯನ್ನು ಗೌರವಿಸಬೇಕು. ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರ ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ. ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net