More

    ಜಿಪಂ, ತಾಪಂ ಚುನಾವಣೆ: ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿದ ಹೈಕೋರ್ಟ್​

    ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ ಹೈಕೋರ್ಟ್​ ಮತ್ತೆ 12 ವಾರ ಕಾಲಾವಕಾಶ ನೀಡಿದೆ.

    ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದ ಹಾಗೂ ಕರ್ನಾಟಕ ಪಂಚಾಯತ್​ ರಾಜ್​ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್​ ರಾಜ್​ ಮತ್ತು ಗ್ರಾಮ ಸ್ವರಾಜ್​ ಕಾಯ್ದೆಗೆ ತಿದ್ದುಪಡಿ ತಂದಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್​ಗೆ ಪಿಐಎಲ್​ ಸಲ್ಲಿಸಿದೆ. ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್​ ಅರಾಧೆ ಹಾಗೂ ನ್ಯಾಯಮೂರ್ತಿ ಎಸ್​.ವಿಶ್ವಜಿತ್​ ಶೆಟ್ಟಿ ಅವರಿದ್ದ ಪೀಠ ವಿಚಾರಣೆ ನಡೆಸಿತು.

    ಅವಧಿ ವಿಸ್ತರಣೆಗೆ ಮಧ್ಯಂತರ ಅರ್ಜಿ: ಅಡ್ವೋಕೇಟ್​ ಜನರಲ್​ ಪ್ರಭುಲಿಂಗ ನಾವದಗಿ ಹಾಜರಾಗಿ, ಜಿಪಂ ಹಾಗೂ ತಾಪಂ ಕ್ಷೇತ್ರಗಳ ಮರುವಿಗಂಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆಯನ್ನು 12 ವಾರಗಳ ಒಳಗೆ ಪೂರ್ಣಗೊಳಿಸುವಂತೆ ಮೇ 24ರಂದು ನ್ಯಾಯಾಲಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಇದೀಗ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಲು ಮತ್ತೆ 3 ತಿಂಗಳು ಕಾಲಾವಕಾಶ ಪಡೆಯುವಂತೆ ಮರುವಿಂಗಡಣೆ ಆಯೋಗ ಸರ್ಕಾರಕ್ಕೆ ಸೆ.19ರಂದು ಪತ್ರ ಬರೆದಿದೆ. ಎಲ್ಲ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಲು ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ. ಆದ್ದರಿಂದ, ಮತ್ತೆ 12 ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಅದನ್ನು ಪರಿಗಣಿಸಿದ ಪೀಠ, 12 ವಾರಗಳಲ್ಲಿ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿತು.

    ಪ್ರಕರಣವೇನು?: ಕಳೆದ ವರ್ಷ ಏಪ್ರಿಲ್​, ಮೇ ಮತ್ತು ಜೂನ್​ ತಿಂಗಳಲ್ಲಿ ಅವಧಿ ಪೂರ್ಣಗೊಂಡ ಜಿಪಂ ಹಾಗೂ ತಾಪಂ ಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಿದ್ದ ರಾಜ್ಯ ಚುನಾವಣಾ ಆಯೋಗ ಕ್ಷೇತ್ರ ಮರುವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಮೀಸಲಾತಿ ಕರಡು ಸಹ ಪ್ರಕಟಗೊಂಡು, ಚುನಾವಣೆ ದಿನಾಂಕ ಘೋಷಣೆಯಾಗಬೇಕು ಎನ್ನುವಷ್ಟರಲ್ಲಿ ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್​ನಲ್ಲಿ ವಿಚಾರಣಾ ಹಂತದಲ್ಲಿತ್ತು. ಈ ಮಧ್ಯೆ, ಸ್ಥಳೀಯ ಸಂಸ್ಥೆಗಳಿಗೆ ಶೀಘ್ರ ಚುನಾವಣೆ ನಡೆಸಬೇಕೆಂದು ಸುಪ್ರೀಂಕೋರ್ಟ್​ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಹೈಕೋರ್ಟ್​ಗೆ ಮೆಮೋ ಸಲ್ಲಿಸಿ, ಜಿಪಂ ಹಾಗೂ ತಾಪಂ ಚುನಾವಣೆ ಸಂಬಂಧ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದೆ.

    ದಸರಾಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡ ಮೈಸೂರು: ಸಾಂಸ್ಕೃತಿಕ ಸಿರಿ- ಧಾರ್ಮಿಕ ಐಸಿರಿಯ ಸಮ್ಮಿಲನ… ಕಳೆಗಟ್ಟಲಿದೆ ನವೋಲ್ಲಾಸ

    ಖುಷಿ ಕ್ಷಣ ಕಳೆಯಲು ಬಂದ ಮೂವರು ಬಿಇ ವಿದ್ಯಾರ್ಥಿಗಳು ದುರಂತ ಅಂತ್ಯ! ಉಡುಪಿಯಲ್ಲಿ ದುರ್ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts