ಕ್ಷಯರೋಗ ಪತ್ತೆಗೆ ಸಮೀಕ್ಷೆ

ವಿಜಯವಾಣಿ ಸುದ್ದಿಜಾಲ ಹಾವೇರಿ

ಕ್ಷಯರೋಗ ಪತ್ತೆ ಹಚ್ಚಲು ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುತ್ತಿದೆ. ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಪಂ ಸಿಇಒ ಕೆ. ಲೀಲಾವತಿ ಹೇಳಿದರು.

ನಗರದ ನಾಗೇಂದ್ರನಮಟ್ಟಿಯಲ್ಲಿರುವ ಶಕ್ತಿ ವೃದ್ದಾಶ್ರಮದಲ್ಲಿ ಸೋಮವಾರ ಆಯೋಜಿಸಿದ್ದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜುಲೈ 15ರಿಂದ 27ರವರೆಗೆ ಜಿಲ್ಲಾದ್ಯಂತ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂ ಸೇವಕರು ಮನೆಮನೆಗೆ ಭೇಟಿ ನೀಡಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸಿ ಸಂಭಾವ್ಯ ಕ್ಷಯ ಪ್ರಕರಣಗಳು ಕಂಡು ಬಂದರೆ ಪರೀಕ್ಷೆಗೆ ಒಳಪಡಿಸುತ್ತಾರೆ. ಕ್ಷಯರೋಗವೆಂದು ದೃಢಪಟ್ಟಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗುತ್ತದೆ. ಯಾವುದೇ ಹಿಂಜರಿಕೆ ಇಲ್ಲದೆ ಸಾರ್ವಜನಿಕರು ತಪಾಸಣೆಗೆ ಮುಂದಾಗುವಂತೆ ಸೂಚಿಸಿದರು.

ಅಧ್ಯಕ್ಷತೆ ವಹಿಸಿದ್ದ ಆರ್​ಸಿಎಚ್ ಅಧಿಕಾರಿ ಡಾ. ಎಂ.ಎನ್. ಜಯಾನಂದ ಮಾತನಾಡಿ, ಜಿಲ್ಲೆಯನ್ನು ಸಂಪೂರ್ಣವಾಗಿ ಕ್ಷಯಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.

ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ನೀಲೇಶ ಎಂ.ಎನ್., ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆ. ಸರಿಯಾದ ವೇಳೆಯಲ್ಲಿ ಸರಿಯಾಗಿ ಚಿಕಿತ್ಸೆ ಪಡೆದುಕೊಂಡರೆ ಸಂಪೂರ್ಣವಾಗಿ ರೋಗವು ಗುಣವಾಗುತ್ತದೆ. ಈ ಕಾರ್ಯಕ್ರಮವನ್ನು ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 2,56,067ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸುವ ಗುರಿ ಹೊಂದಲಾಗಿದೆ ಎಂದರು.

ಟಿಎಚ್​ಒ ಡಾ. ಪ್ರಭಾಕರ ಕುಂದೂರ, ಶಕ್ತಿ ವೃದ್ಧಾಶ್ರಮದ ಅಧೀಕ್ಷಕ ಕಾಳಪ್ಪ ಛಲವಾದಿ, ಉಮಾಪತಿ ಬಿ.ಎಸ್., ಲಿಂಗರಾಜ ಸಣ್ಣಕೂಡಲ, ವಿನಾಯಕ ಜೆ.ಪಿ., ಪಿ.ಎನ್. ಪಾಟೀಲ, ರಾಜು ಸಬಳದ, ಚನ್ನಪ್ಪ ಲಮಾಣಿ, ವಸಂತಕುಮಾರಿ ಹಾಗೂ ನಗರ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಈಗಾಗಲೇ ಕ್ಷಯರೋಗಕ್ಕೆ ಸರ್ಕಾರಿ ಅಥವಾ ಖಾಸಗಿಯಲ್ಲಿ ಚಿಕಿತ್ಸೆ ಪಡೆದವರು ಪರೀಕ್ಷೆಗೆ ಒಳಪಟ್ಟು ಕ್ಷಯ ಮರುಕಳಿಸಿದೆಯೇ ಎಂಬುದನ್ನು ತಿಳಿಯಬಹುದು. ಕ್ಷಯರೋಗ ಪತ್ತೆ, ಚಿಕಿತ್ಸೆ ಉಚಿತವಾಗಿದ್ದು, ಚಿಕಿತ್ಸಾ ಅವಧಿಯಲ್ಲಿ ಮಾಸಿಕ 500ರೂ.ಗಳ ಸಹಾಯಧನವನ್ನು ಪೌಷ್ಟಿಕ ಆಹಾರಕ್ಕಾಗಿ ನೇರವಾಗಿ ರೋಗಿಯ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.

ಕೆ. ಲೀಲಾವತಿ, ಜಿಪಂ ಸಿಇಒ

Leave a Reply

Your email address will not be published. Required fields are marked *