ತೈಲ ಬೆಲೆ ಏರಿಕೆ ಖಂಡಿಸಿ ಆಮ್ ಆದ್ಮಿ ಪ್ರತಿಭಟನೆ

2 Min Read
ತೈಲ ಬೆಲೆ ಏರಿಕೆ ಖಂಡಿಸಿ ಆಮ್ ಆದ್ಮಿ ಪ್ರತಿಭಟನೆ

ಬೆಂಗಳೂರು: ತೈಲ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಮುಖಂಡರು ಮಂಗಳವಾರ ನಗರದ ಸ್ವಾತಂತ್ರ್ಯ ಉದ್ಯಾನವನ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.

ದ್ವಿಚಕ್ರ ವಾಹನಗಳಿಗೆ ಹೂವಿನ ಹಾರಗಳನ್ನು ಹಾಕಿ ಅಣುಕು ಅಂತ್ಯಕ್ರಿಯೆ ನಡೆಸುವ ಮೂಲಕ ಗಮನ ಸೆಳೆದರು. ಸೈಕಲ್‌ಗಳನ್ನು ಏರಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆ ನೇತೃತ್ವ ವಹಿಸಿದ್ದ ಎಎಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೋಹನ್ ದಾಸರಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದೆ. ಸಮರ್ಪಕವಾಗಿ ಸಂಪನ್ಮೂಲ ಕ್ರೋಡಿಕರಣ ಮಾಡಿದರೆ, ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆಯನ್ನು ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಇತರೆ ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಹಣ ಉಳಿಯುತ್ತದೆ ಎಂದು ಹೇಳಿದರು.

ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ 1 ವರ್ಷದ ಅವಧಿಯೊಳಗೆ ಅಬಕಾರಿ ತೆರಿಗೆಯನ್ನು ಮೂರು ಬಾರಿ ಹೆಚ್ಚಿಸಿದ್ದಾರೆ. ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಗರಿಷ್ಠ ಶೇ.25ರವರೆಗೆ ಏರಿಕೆ ಮಾಡಿದ್ದಾರೆ. ನಾನಾ ಹಂತದ ವಾಹನಗಳಿಗೆ ವಿಧಿಸುವ ತೆರಿಗೆಯನ್ನು ಹೆಚ್ಚಳ ಮಾಡಿದ್ದಾರೆ. ಬೇರೆ ಯಾವೆಲ್ಲ ಮೂಲಗಳಿಂದ ತೆರಿಗೆ ಹೆಸರಲ್ಲಿ ಜನಸಾಮಾನ್ಯರನ್ನು ಹಿಂಡಬಹುದು ಎಂದು ಹುಡುಕುತ್ತಿದ್ದಾರೆ. ಇದರ್ಥ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕವಾಗಿ ಸುರಿಯುತ್ತಿರುವ 52 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಒದ್ದಾಡುತ್ತಿದ್ದಾರೆ ಎಂಬುದಾಗಿದೆ. ಅಧಿಕಾರಕ್ಕೆ ಬರಬೇಕು ಎಂಬ ಹಪಾಹಪಿಯಲ್ಲಿ ಅಧ್ಯಯನ ರಹಿತವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವುದೇ ಇದಕ್ಕೆಲ್ಲ ಮೂಲ ಕಾರಣ ಎಂದು ಆರೋಪಿಸಿದರು.

See also  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಎಎಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸೆಹ್ವಾನಿ, ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ರಾಜ್ಯ ಕಾರ್ಯದರ್ಶಿ ಉಷಾ ಮೋಹನ್, ರವಿ ಕುಮಾರ್, ಜಗದೀಶ್ ಚಂದ್ರ, ಜಗದೀಶ್ ಬಾಬು, ವೀಣಾ ಸರಾವು, ಅನಿಲ್ ನಾಚಪ್ಪ, ಮಹಾಲಕ್ಷ್ಮಿ, ಅಂಜನಾ ಗೌಡ, ಪುಟ್ಟಣ್ಣ, ಶಶಿಧರ್ ಆರಾಧ್ಯ, ರಾಮಾಂಜನೇಯ, ಲೋಕೇಶ್ ಕುಮಾರ್ ಸೇರಿದಂತೆ ಮತ್ತಿತರ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Share This Article