More

    ಸರ್ಕಾರದ ಧೋರಣೆಯಿಂದ ವಿದ್ಯಾರ್ಥಿಗಳು ಅತಂತ್ರ

    ಯಲಬುರ್ಗಾ: ರಾಜ್ಯ ಸರ್ಕಾರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದೆ ಎಂದು ಆರೋಪಿಸಿ ಎಬಿವಿಪಿ ತಾಲೂಕು ಘಟಕದಿಂದ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಸೀಲ್ದಾರ್ ನಾಗಪ್ಪ ಸಜ್ಜನ್‌ಗೆ ಗುರುವಾರ ಮನವಿ ಸಲ್ಲಿಸಲಾಯಿತು.

    ಎಬಿವಿಪಿ ಜಿಲ್ಲಾ ಸಂಚಾಲಕ ಶಶಾಂಕ್ ಪಾಟೀಲ್ ಮಾತನಾಡಿ, ದೇಶದಲ್ಲಿ ಕರ್ನಾಟಕ ಉತ್ತಮ ಶಿಕ್ಷಣ ವ್ಯವಸ್ಥೆ ಹಾಗೂ ಉತ್ಕೃಷ್ಟ ಮಟ್ಟದ ವಿಶ್ವವಿದ್ಯಾಲಯಗಳಿಂದ ಹೆಸರಾಗಿದೆ. ಉನ್ನತ ಶಿಕ್ಷಣದ ಆಸೆ ಇಟ್ಟುಕೊಂಡು ಅದೆಷ್ಟೋ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಅವಲಂಬಿಸಿ ಕಾಲೇಜುಗಳಿಗೆ ದಾಖಲಾಗುತ್ತಾರೆ. ಆದರೆ, ರಾಜ್ಯ ಸರ್ಕಾರ ಶಿಕ್ಷಣಕ್ಕೆ ನೀಡಬೇಕಾದ ಪ್ರಾಮುಖ್ಯ ನೀಡದೆ ವಿದ್ಯಾರ್ಥಿ ವೇತನದಲ್ಲೂ ರಾಜಕೀಯ ಮಾಡುತ್ತಿದೆ ಎಂದು ದೂರಿದರು.

    ಎಸ್‌ಎಸ್‌ಪಿ ತಂತ್ರಾಂಶದ ಮೂಲಕ ಬಿಸಿಎಂ, ಕೃಷಿ, ಸಮಾಜ ಕಲ್ಯಾಣ, ಆಯುಷ್, ತಾಂತ್ರಿಕ ಶಿಕ್ಷಣ ಹಾಗೂ ಇತರ ಇಲಾಖೆಗಳಿಗೆ ವಿದ್ಯಾರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯಾರ್ಥಿ ವೇತನ ನೀಡದೆ ವಿದ್ಯಾರ್ಥಿಗಳ ಶಿಕ್ಷಣವನ್ನು ಅತಂತ್ರ ಸ್ಥಿತಿಗೆ ದೂಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

    ರಾಜ್ಯದ ರೈತರ ಮಕ್ಕಳ ಶಿಕ್ಷಣಕ್ಕಾಗಿ ಹಿಂದಿನ ಸರ್ಕಾರ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಯೋಜನೆ ಆರಂಭಿಸಿತ್ತು. ಈ ಯೋಜನೆಯನ್ನು ಈಗಿನ ಸರ್ಕಾರ ತಡೆಹಿಡಿಯುವ ಕೆಲಸ ಮಾಡಿ, ರೈತರ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವ ಕೆಲಸ ಮಾಡುತ್ತಿದೆ. ಈ ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡಬೇಕೆಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts