

ನೆಲಮಂಗಲ: ಕುಣಿಗಲ್ ಬೈಪಾಸ್ನಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾರೆ.
ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಚಾಲಕನ ಅಜಾಗರೂಕತೆಯಿಂದ ಬುಧವಾರ ರಾತ್ರಿ ಈ ಅವಘಡ ಸಂಭವಿಸಿದ್ದು, ಲಾರಿ ಚಕ್ರಕ್ಕೆ ಸಿಲುಕಿದ್ದ ಬೈಕ್ ಸವಾರ, ಜಾರ್ಖಂಡ್ ಮೂಲದ ಗುರುದೇವ(20) ರಕ್ತದಮಡುವಿನಲ್ಲೇ ನರಳಾಡುತ್ತಿದ್ದ. ಸ್ಥಳೀಯರೇ ಆಂಬುಲೆನ್ಸ್ ಮೂಲಕ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಗೆ ರವಾನಿಸಿದ್ದರು.
ಗಂಭೀರ ಗಾಯಗೊಂಡಿದ್ದ ಗುರುದೇವ ಚಿಕಿತ್ಸೆ ಫಲಿಸಿದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಮತ್ತೊಬ್ಬ ಬೈಕ್ ಸವಾರ, ಶಾಂತಿನಗರದ ರಂಗಸ್ವಾಮಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ನಡೆದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.