ಅನಧಿಕೃತ ಕಲ್ಲುಕ್ವಾರಿಗಳ ವಿರುದ್ಧ ಕ್ರಮ

ಉಡುಪಿ: ಜಿಲ್ಲೆಯ ಎಲ್ಲ ಅನಧಿಕೃತ ಕಲ್ಲುಕ್ವಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಕೆಡಿಪಿ ಸಭೆಯಲ್ಲಿ ಸೂಚಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಶನಿವಾರ ಜಿ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು. ವಿಷಯ ಪ್ರಸ್ತಾಪಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಕುಂದಾಪುರ ತಾಲೂಕಿನಲ್ಲಿ ಹಲವಾರು ಕಲ್ಲುಕ್ವಾರಿಗಳು ಅನಧಿಕೃತವಾಗಿ ಕಾರ್ಯಾಚರಿಸುತ್ತಿವೆ. ಇದರಿಂದ ಸರ್ಕಾರಕ್ಕೆ ಬರಬೇಕಾದ ಕೋಟ್ಯಂತರ ರೂ. ರಾಜಧನ ತಪ್ಪಿ ಹೋಗುತ್ತಿದೆ. ಕೆಲವು ಕ್ವಾರಿಗಳು ಅರಣ್ಯ ಭೂಮಿಯಲ್ಲಿವೆ. ಯಾವುದೇ ಮುನ್ನೆಚ್ಚರಿಕಾ ಕ್ರಮ ವಹಿಸದ ಕ್ವಾರಿಗಳಿದ್ದು, ಕೂಡಲೇ ಕ್ರಮ ಜರಗಿಸಬೇಕು ಎಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ದೀರ್ಘಾವಧಿ ರಜೆ ತೆರಳಿದ ಸಂದರ್ಭ ಪ್ರಭಾರ ಶಿಕ್ಷಕರು ಹಾಜರಾಗದೆ ಪಠ್ಯ ಪ್ರವಚನಗಳಿಗೆ ತೊಂದರೆಯಾಗುತ್ತಿದೆ. ಶಿಕ್ಷಣ ಇಲಾಖೆ ಸೂಕ್ತ ನಿಯೋಜನೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿ.ಪಂ. ಸ್ಥಾಯಿ ಸಮಿತಿಯ ಉದಯ ಕೋಟ್ಯಾನ್ ತಿಳಿಸಿದರು. ಜಿಲ್ಲೆಯಲ್ಲಿರುವ ಎಲ್ಲ ಅತಿಥಿ ಶಿಕ್ಷಕರಿಗೆ ಬಾಕಿ ಇರುವ ವೇತನ ಈಗಾಗಲೇ ಪಾವತಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಗೆ ತಿಳಿಸಿದರು. ಪಶ್ಚಿಮ ವಾಹಿನಿ ಯೋಜನೆ ಸಂಬಂಧಿಸಿ ಜಿಲ್ಲೆಯಲ್ಲಿ 14 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಭೆಗೆ ತಿಳಿಸಿದರು.

ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಮತ್ತು ಸಮಾಜಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್‌ಗಳಲ್ಲಿ ಆಗಿಂದಾಗ್ಗೆ ವಿದ್ಯಾರ್ಥಿಗಳ ಸಭೆ ನಡೆಸಿ ಅಲ್ಲಿನ ಕುಂದುಕೊರತೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧ್ಯಕ್ಷ ದಿನಕರ ಬಾಬು ಸೂಚಿಸಿದರು. ಸಿಇಒ ಸಿಂಧು ಬಿ. ರೂಪೇಶ್ ಮಾತನಾಡಿ, ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಎಲ್ಲ ಕಾರ್ಯಕ್ರಮಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಅಲ್ಲದೇ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಗೆ ಪ್ರತೀ ತಿಂಗಳು ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಪಂಚಾಯಿತಿಗಳ ಕಂಪ್ಯೂಟರೀಕರಣ ಮತ್ತು ಇ-ಸೇವೆ ವ್ಯವಸ್ಥೆ ಉತ್ತಮಪಡಿಸಲು ಪ್ರತೀ ಗ್ರಾಪಂಗೆ 25 ಸಾವಿರ ರೂ. ಅನುದಾನ ಬಂದಿದ್ದು, ಕೂಡಲೇ ಗ್ರಾಪಂಗಳು ಕಾರ್ಯಪ್ರವೃತ್ತವಾಗಬೇಕು. ಗ್ರಾ.ಪಂ ಸದಸ್ಯರ ಗೌರವಧನವನ್ನು ನೇರವಾಗಿ ಸದಸ್ಯರ ಬ್ಯಾಂಕ್ ಖಾತೆಗೆ ಜಮಾ ಮಾಡಲು ಖಜಾನೆ -2 ವ್ಯವಸ್ಥೆಯಡಿ ಕ್ರಮ ಕೈಗೊಳ್ಳಲು ಜಿಪಂ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ತಿಳಿಸಿದರು.

ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ್ ಪಡುಬಿದ್ರಿ, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.

ಗಂಗಾ ಕಲ್ಯಾಣ ಯೋಜನೆ ಅನುಷ್ಠಾನ ವಿಳಂಬ: ಗಂಗಾ ಕಲ್ಯಾಣ ಯೋಜನೆಯಲ್ಲಿ ಬೋರ್‌ವೆಲ್ ಕೊರೆದರೂ ಅವುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬವಾಗುತ್ತಿದೆ. ಇದರಿಂದ ಫಲಾನುಭವಿಗಳಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟ ನಿಗಮಗಳು ಮತ್ತು ಮೆಸ್ಕಾಂ ಜಂಟಿಯಾಗಿ ಈ ಬಗ್ಗೆ ಕ್ರಮ ಜರುಗಿಸಲು ಅಧ್ಯಕ್ಷ ದಿನಕರ ಬಾಬು ಸೂಚಿಸಿದರು. ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಲಾಗುವ ಕಿಂಡಿ ಅಣೆಕಟ್ಟುಗಳ ನಿರ್ವಹಣೆ ಇಲ್ಲದೇ ವ್ಯರ್ಥವಾಗುತ್ತಿವೆ. ಇದನ್ನು ತಪ್ಪಿಸಲು ಕಿಂಡಿ ಅಣೆಕಟ್ಟು ವ್ಯಾಪ್ತಿಯಲ್ಲಿ ಬಳಕೆದಾರರ ಸಮಿತಿ ರಚಿಸಿ ಅವುಗಳಿಗೆ ಹಸ್ತಾಂತರಿಸಬೇಕು ಎಂದು ಅಧ್ಯಕ್ಷರು ಹೇಳಿದರು.