ಬಳ್ಳಾರಿ: ಬೇಸಿಗೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕು, ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಂಟು ಪ್ರಮುಖ ಹಳ್ಳಿಗಳಲ್ಲಿ ಬೇಸಿಗೆಯಲ್ಲಿ ನೀರಿನ ಅಭಾವವಾಗಲಿದ್ದು, ಈಗಾಗಲೇ ಬಾಡಿಗೆ ಬೋರ್‌ವೆಲ್ಗಳ ಮೂಲಕ ನೀರು ಪೂರೈಕೆ ಮಾಡಲು ಕ್ರಮ ವಹಿಸಲಾಗಿದೆ. ಜಿಲ್ಲೆಯ ಜಾನುವಾರುಗಳಿಗೆ 24 ವಾರಕ್ಕೆ ಆಗುವಷ್ಟು ಮೇವಿನ ಲಭ್ಯತೆ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಹಿಂದೆ ಜಲಾಶಯದಿಂದ ಮಾರ್ಚ್ ಅಂತ್ಯದ ವರೆಗೆ ಕುಡಿವ ನೀರಿನ ಲಭ್ಯತೆ ಇತ್ತು. ಆದರೆ ಈ ಬಾರಿ ಮಳೆ ಅಭಾವದಿಂದ ಕುಡಿಯುವ ನೀರಿನ ಸಮಸ್ಯೆ ಆಗಬಹುದು . ಅದಕ್ಕಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ಮುಂದಿನ ದಿನಗಳಲ್ಲಿ ಜಾತ್ರೆ, ಹಬ್ಬ ಆರಂಭವಾಗಲಿದ್ದು, ಆಯಾ ವ್ಯಾಪ್ತಿಯ ಗ್ರಾಮಗಳ ಕೆರೆಗಳಲ್ಲಿ ಕುಡಿಯುವ ನೀರನ್ನು ಮಿತವಾಗಿ ಬಳಸಬೇಕು ಎಂದು ಸೂಚನೆ ನೀಡಿದರು.
ಬರ ಪರಿಹಾರ 7.26 ಕೋಟಿ ರೂ. ಪಾವತಿ
ಕಳೆದ 2023-24ರ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿದ ಜಿಲ್ಲೆಯ 36,944 ರೈತರಿಗೆ ರಾಜ್ಯ ಸರ್ಕಾರವು 2 ಸಾವಿರ ರೂ. ನಂತೆ ಮೊದಲ ಕಂತಿನ ಬರ ಪರಿಹಾರ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಡಿಸಿ ಪ್ರಶಾಂತ್ ಕುಮಾರ್ ತಿಳಿಸಿದರು.
ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿರುವ ರೈತರನ್ನು ಏಳು ಹಂತದಲ್ಲಿ ಪರಿಹಾರ ನೀಡಲಾಗುತ್ತಿದ್ದು, ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಮೊದಲ ಹಂತದಲ್ಲಿ 36,944 ರೈತರಿಗೆ ಒಟ್ಟು 7.26 ಕೋಟಿ ರೂ. ಬರ ಪರಿಹಾರ ಹಣ ಜಮೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಹಣ ಜಮೆಯಾಗಲಿದೆ ಎಂದರು.
ಜಿಲ್ಲೆಯ ಮಳೆಯಾಶ್ರಿತ 29636 ಹೆಕ್ಟೇರ್ ಪ್ರದೇಶ ಮತ್ತು 11254 ಹೆಕ್ಟೇರ್ ನೀರಾವರಿ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಸಿರಗುಪ್ಪ ತಾಲೂಕಿನಲ್ಲಿ 21660 ಫಲಾನುಭವಿಗಳಿಗೆ 4.28 ಕೋಟಿ ರೂ., ಬಳ್ಳಾರಿ ತಾಲೂಕಿನಲ್ಲಿ 2682 ರೈತರಿಗೆ 52.38 ಲಕ್ಷ ರೂ., ಸಂಡೂರು ತಾಲೂಕಿನ 11,779 ರೈತರಿಗೆ 2.30 ಕೋಟಿ ರೂ., ಕುರುಗೋಡು ತಾಲೂಕಿನಲ್ಲಿ 383 ಫಲಾನುಭವಿಗಳಿಗೆ 7.30 ಲಕ್ಷ ರೂ. ಮತ್ತು ಕಂಪ್ಲಿ ತಾಲೂಕಿನ 440 ಜನರಿಗೆ 8.34 ಲಕ್ಷ ರೂ. ಪರಿಹಾರ ಹಣ ಜಮೆಯಾಗಿದೆ ಎಂದು ಮಾಹಿತಿ ನೀಡಿದರು.
ಚಿತ್ರಕಲಾ ಪ್ರದರ್ಶನ ನಾಳೆ
ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ ಹಿನ್ನ್ನೆಲೆಯಲ್ಲಿ ವಿವಿಧ ಶಾಲೆ-ಕಾಲೇಜು ವಿಭಾಗದಲ್ಲಿ ಏರ್ಪಡಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರ ಅತ್ಯುತ್ತಮ ಚಿತ್ರಗಳನ್ನು ಪ್ರದರ್ಶಿಸಲು ಫೆ.16 ರಂದು ನಗರದ ವಾಲ್ಮೀಕಿ ಭವನದಲ್ಲಿ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.
ಭಾರತದ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ ಸಂವಿಧಾನದ ಆಶಯ ಮತ್ತು ಮೌಲ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ ಸಂವಿಧಾನ ಜಾಗೃತಿ ಜಾಥಾವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಸಂಚರಿಸುತ್ತಿದೆ ಮತ್ತು ಸಾರ್ವಜನಿಕ ವಲಯದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ.ಎಚ್.ಸತೀಶ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.