

Darshan Bail: ಚಿತ್ರದುರ್ಗದ ರೇಣುಕಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ಎ2 ಆರೋಪಿ ದರ್ಶನ್ ಮತ್ತು ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನನ್ನು ಕಡೆಗೂ ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ನ್ಯಾಯಧೀಶರಾದ ಜೆ.ಬಿ. ಪರ್ದಿವಾಲಾ, ಆರ್.ಮಹಾದೇವನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ಈ ಮಹತ್ವದ ತೀರ್ಪನ್ನು ನೀಡಿದೆ.
ಆ.14ಕ್ಕೆ ತೀರ್ಪನ್ನು ಕಾಯ್ದಿರಿಸಿದ್ದ ನ್ಯಾಯಾಲಯ, ಕಡೆಗೂ ರಾಜ್ಯ ಸರ್ಕಾರ ಪರ ತೀರ್ಪು ನೀಡಿದೆ. ಎ2 ಆರೋಪಿ ದರ್ಶನ್ ಮತ್ತು ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನನ್ನು ರದ್ದುಗೊಳಿಸುವಂತೆ ಸರ್ಕಾರ ಪರ ವಕೀಲರು ಪ್ರಬಲ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಸೂಕ್ಷ್ಮವಾಗಿ ಗಮನಿಸಿದ ಸುಪ್ರೀಂಕೋರ್ಟ್, ಕಡೆಗೂ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಮೂಲಕ ದರ್ಶನ್ಗೆ ಜೈಲು ದರ್ಶನ ತೋರಿಸಿದೆ.
ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಎಷ್ಟೇ ದೊಡ್ಡವರಿದ್ದರೂ ಕಾನೂನಿನ ಮುಂದೆ ದೊಡ್ಡವರಲ್ಲ. ಆರೋಪಿ ಜೈಲಿನ ಲಾನ್ನಲ್ಲಿ ಸಿಗರೇಟ್ ಸೇದುವುದು ಕಂಡಬಂದರೆ ಜೈಲಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಕೋರ್ಟ್ ಎಚ್ಚರಿಸಿದೆ.
ಆರೋಪಿಗಳಿಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು. ಇದು ಲ್ಯಾಂಡ್ ಮಾರ್ಕ್ ತೀರ್ಪು. ಇಲ್ಲಿ ಹೈಕೋರ್ಟ್ ಆದೇಶದಲ್ಲಿ ದೋಷವಿದೆ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ.
2024ರ ಡಿಸೆಂಬರ್ 13ರಂದು ದರ್ಶನ್ ಮತ್ತು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದಾದ ಬಳಿಕ ಜೈಲಿನಿಂದ ಹೊರಬಂದಿದ್ದ ಆರೋಪಿಗಳು ವಿದೇಶ ಪ್ರಯಾಣ, ಸುತ್ತಾಟ, ಮೋಜು-ಮಸ್ತಿ ಮಾಡಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಜಾಲತಾಣಗಳಲ್ಲಿ ಹರಿದಾಡಿತ್ತು. ಇದೀಗ ಕೋರ್ಟ್, ಎಲ್ಲ 7 ಆರೋಪಿಗಳ ಜಾಮೀನು ರದ್ದುಗೊಳಿಸುವ ಮೂಲಕ ಮತ್ತೇ ಜೈಲುವಾಸ ಅನುಭವವನ್ನು ಮುಂದುವರಿಸುವಂತೆ ಸೂಚಿಸಿದೆ.
ಸುಪ್ರೀಂಕೋರ್ಟ್ ಹೇಳಿದ್ದೇನು?
ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಜಾಮೀನು ನೀಡಿದ ಕ್ರಮವನ್ನು ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಟೀಕಿಸಿದ್ದರು. ಹೈಕೋರ್ಟ್ ಆದೇಶವನ್ನು ನೀಡಿದ ರೀತಿ ತುಂಬಾ ವಿಷಾದವಿದೆ. ಇತರ ಪ್ರಕರಣಗಳಲ್ಲಿಯೂ ಹೈಕೋರ್ಟ್ ಅದೇ ರೀತಿಯ ಆದೇಶವನ್ನು ನಿರ್ದೇಶಿಸುತ್ತದೆಯೇ? ಕೊಲೆ ಪ್ರಕರಣಕ್ಕೆ ಬಂಧನದ ಆಧಾರಗಳನ್ನು ಒದಗಿಸಲಾಗಿಲ್ಲ ಎಂದು ಹೈಕೋರ್ಟ್ ಹೇಳಿರುವುದು ತೊಂದರೆದಾಯಕವಾಗಿದೆ. ಇದು ಪ್ರಾಥಮಿಕವಾಗಿ, ನ್ಯಾಯಾಂಗ ಅಧಿಕಾರದ ದುರ್ಬಳಕೆಯಾಗಿದೆ. ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅಂತಹ ತಪ್ಪನ್ನು ಮಾಡುವುದು ಸ್ವೀಕಾರಾರ್ಹ ಆದರೆ, ಹೈಕೋರ್ಟ್ ನ್ಯಾಯಮೂರ್ತಿಗಳು ಈ ರೀತಿ ಮಾಡುವುದು ಸರಿಯೇ ಎಂದು ಅಸಮಾಧಾನ ಹೊರಹಾಕಿದರು. ಈ ತೀರ್ಪುನಲ್ಲಿ ಹೈಕೋರ್ಟ್ ಮಾಡಿದ ತಪ್ಪನ್ನು ನಾವು ಮಾಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಒತ್ತಿ ಹೇಳಿತ್ತು.
ಅಂದಹಾಗೆ, ಜುಲೈ 24ರಂದು ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಹಾಗೂ ನ್ಯಾ.ಮಹದೇವನ್ ಅವರಿದ್ದ ದ್ವಿಸದಸ್ಯ ಪೀಠ, ಸರ್ಕಾರ ಹಾಗೂ ದರ್ಶನ ಪರ ವಕೀಲರ ವಾದವನ್ನು ಆಲಿಸಿತು. ಬಳಿಕ ಎರಡೂ ಕಡೆಯ ವಕೀಲರಿಗೆ ಲಿಖಿತ ವಾದಾಂಶವನ್ನು ಸಲ್ಲಿಸಲು ಕೋರ್ಟ್ ಒಂದು ವಾರಗಳ ಗಡುವು ನೀಡಿದ್ದು, ಆ ಬಳಿಕ ತೀರ್ಪು ಪ್ರಕಟಿಸಲಿದೆ. 3 ಪುಟದೊಳಗೆ ಲಿಖಿತ ವಾದ ಸಲ್ಲಿಸಲು ನ್ಯಾಯಾಲಯ ಹೇಳಿದೆ. ಸರ್ಕಾರದ ಪರ ಸಿದ್ಧಾರ್ಥ್ ಲೂತ್ರಾ ಹಾಗೂ ನಟ ದರ್ಶನ್ ಪರ ಸಿದ್ಧಾರ್ಥ್ ದವೆ ವಾದ ಮಂಡನೆ ಮಾಡಿದರು. ಸಾಕ್ಷಿಗಳು, ಪ್ರತ್ಯಕ್ಷದರ್ಶಿಗಳ ಹೇಳಿಕೆ, ದರ್ಶನ್ ಹಾಗೂ ಪವಿತ್ರಾ ಗೌಡ ನಡುವಿನ ಸಂಬಂಧ ಹಾಗೂ ಕೊಲೆಗೆ ಕಾರಣವೇನು? ಮುಂತಾದ ವಿಚಾರಗಳ ಬಗ್ಗೆ ನ್ಯಾಯಾಲಯ ಪ್ರಶ್ನೆಗಳನ್ನು ಕೇಳಿತು. ಎರಡೂ ಕಡೆಯ ವಕೀಲರು ಪ್ರಬಲವಾಗಿ ವಾದ ಮಂಡನೆ ಮಾಡಿದ್ದು, ವಾದವನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಪ್ರಕಟಿಸಿದೆ.
ಕೊಲೆ ಕೇಸ್ನ ಆರೋಪಿಗಳಾದ ನಟ ದರ್ಶನ್, ಪವಿತ್ರಗೌಡ, ಪ್ರದೂಶ್, ಲಕ್ಷ್ಮಣ್, ನಾಗರಾಜು ಹಾಗೂ ಅನುಕುಮಾರ್ ಸೇರಿದಂತೆ 7 ಪ್ರಮುಖ ಆರೋಪಿಗಳಿಗೆ ಕಳೆದ(2024) ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರದ ಪರ ನಗರ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಸುದೀರ್ಘ ವಾದ-ವಿವಾದ ಪರಿಶೀಲಿಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತು. 2024ರ ಜೂನ್ 8ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಈ ಹತ್ಯೆಯ ಕೇಸ್ನಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿತ್ತು. 6 ತಿಂಗಳ ಬಳಿಕ ಪ್ರಕರಣದ ಎಲ್ಲಾ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು.