ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಿ

ಶಿವಮೊಗ್ಗ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಿಸಿ ಕಚೇರಿಯಲ್ಲಿ ಚುನಾವಣಾ ಸಿದ್ಧತೆಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದ ಅವರು, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಚುನಾವಣಾ ನೀತಿ ಸಂಹಿತೆ ಅನುಷ್ಠಾನಕ್ಕೆ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ರಾಜಕೀಯ ಪಕ್ಷಗಳ ಫ್ಲೆಕ್ಸ್ ಬ್ಯಾನರ್ ತೆರವುಗೊಳಿಸಲು ಈಗಾಗಲೇ ಸೂಚಿಸಲಾಗಿದ್ದು, ಅನುಮತಿ ಇಲ್ಲದೆ ಫ್ಲೆಕ್ಸ್, ಬ್ಯಾನರ್ ಅಳವಡಿಸಬಾರದು. ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ನಗರ ವ್ಯಾಪ್ತಿಯ ಎಲ್ಲ ಸರ್ಕಾರಿ ವಸತಿಗೃಹಗಳನ್ನು ಆಯಾ ತಹಸೀಲ್ದಾರ್ ಅವರ ವಶಕ್ಕೆ ಒಪ್ಪಿಸಬೇಕು. ಪಾಲಿಕೆ ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರ ವಾಹನಗಳನ್ನು ಹಿಂಪಡೆದು ಆಯುಕ್ತರ ವಶದಲ್ಲಿಟ್ಟುಕೊಳ್ಳಬೇಕು ಎಂದರು.

1,500ಕ್ಕಿಂತ ಹೆಚ್ಚು ಮತದಾರರಿರುವಲ್ಲಿ ಹೆಚ್ಚುವರಿ ಮತದಾನ ಕೇಂದ್ರ ತೆರೆಯುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಬಹುದು. ಎಲ್ಲ ಮತದಾನ ಕೇಂದ್ರಗಳಲ್ಲಿ ಕನಿಷ್ಠ ಮೂಲಸೌಕರ್ಯ ಲಭ್ಯವಿರುವುದನ್ನು ಖಾತ್ರಿಪಡಿಸಬೇಕು. ಮತದಾನ ಕೇಂದ್ರದ ಹೊರಗೆ ಹಾಗೂ ಚುನಾವಣಾಧಿಕಾರಿಗಳ ಕಾರ್ಯಾಲಯದ ಹೊರಗೆ ಫಲಕ ಅಳವಡಿಸುವಂತೆ ಸೂಚಿಸಿದರು. ಉಪವಿಭಾಗಾಧಿಕಾರಿ ಡಾ. ಎಂ.ದಾಸೇಗೌಡ ಮತ್ತಿತರ ಅಧಿಕಾರಿಗಳು ಇದ್ದರು.