

ಧಾರವಾಡ: ಜಿಲ್ಲೆಯ 3 ತಾಲೂಕುಗಳನ್ನು ಹೆಚ್ಚುವರಿಯಾಗಿ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಸಂಜೆ ಘೋಷಿಸಿದೆ. ಕಲಘಟಗಿ, ಅಳ್ನಾವರ, ಅಣ್ಣಿಗೇರಿ ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದೆ. ಈ ಮೂಲಕ ಜಿಲ್ಲೆಯ ಎಂಟೂ ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿದಂತಾಗಿದೆ.
ರಾಜ್ಯ ಸರ್ಕಾರ ಈ ಮೊದಲು ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿ ನಗರ, ಕುಂದಗೋಳ, ನವಲಗುಂದ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿತ್ತು. ಇದಾದ ನಂತರ ಕಲಘಟಗಿ, ಅಳ್ನಾವರ, ಅಣ್ಣಿಗೇರಿಯ ರೈತರು ತಮ್ಮ ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಬೇಕು ಎಂದು ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಆಯಾ ಶಾಸಕರ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದ್ದರು.
ಅ. 7ರಂದು ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳಿದ್ದ ಸ್ಥಳಕ್ಕೆ ತೆರಳಿದ್ದ ರೈತರು ತಮ್ಮ ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದ್ದರು. ಅಲ್ಲದೆ, ಹಾಳಾದ ಗೋವಿನಜೋಳ ಮತ್ತು ಕಬ್ಬಿನ ಬೆಳೆಗಳನ್ನು ತೋರಿಸಿ ಮನವಿ ಸಲ್ಲಿಸಿದ್ದರು.