ಮುಂದುವರಿದ ರೈತರ ಅಹೋರಾತ್ರಿ ಧರಣಿ

 

ಬೆಳಗಾವಿ : ಕಬ್ಬಿನ ಬಾಕಿ ಬಿಲ್ ನೀಡುವುದು, ಎಫ್‌ಆರ್‌ಪಿ ದರ ನಿಗದಿ ಹಾಗೂ ಹಾಗೂ ಕಬ್ಬಿನ ಉಪ ಉತ್ಪನ್ನಗಳಲ್ಲಿನ ಲಾಭಾಂಶ ನೀಡುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸೋಮವಾರ 3ನೇ ದಿನವೂ ಮುಂದುವರಿದಿದೆ.

ಸೋಮವಾರ ಬೆಳಗ್ಗೆಯಿಂದಲೆ ಪ್ರತಿಭಟನೆ ನಿರತ ರೈತರು ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಅರೆಬೆತ್ತಲೆ ದೀಡ್ ನಮಸ್ಕಾರ ಹಾಕಿದರು. ಜತೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರೈತ ಮಹಿಳೆಯರು ತಲೆಯ ಮೇಲೆ ಕಲ್ಲು, ಮಣ್ಣು ಹಾಗೂ ಸಕ್ಕರೆ ಬುಟ್ಟಿಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.

ಕಳೆದ ನಾಲ್ಕೈದು ತಿಂಗಳುಗಳಿಂದ ಕಬ್ಬಿನ ಬಾಕಿ ಬಿಲ್ ಮತ್ತು ಎಫ್‌ಆರ್‌ಪಿ ದರಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ, ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳ ವಿರುದ್ಧ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳದೆ ರಕ್ಷಿಸುತ್ತಿದ್ದಾರೆ. ಜಿಲ್ಲಾಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು. ಜತೆಗೆ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿರುವ ಸಕ್ಕರೆ ನಿರ್ದೇಶನಾಲಯ ಆಯುಕ್ತರು, ಆಹಾರ ಇಲಾಖೆ ಜಿಲ್ಲಾ ಉಪನಿರ್ದೇಶಕರನ್ನು ತನಿಖೆಗೆ ಒಳಪಡಿಸಬೇಕು ಎಂದು ರೈತರು ಆಗ್ರಹಿಸಿದರು.

15 ದಿನಗಳ ಒಳಗಾಗಿ ಎಲ್ಲ ಸಮಸ್ಯೆ ಪರಿಹರಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರು. ಆದರೆ, ಈ ವರೆಗೆ ಯಾವುದೆ ಬೇಡಿಕೆ ಈಡೇರಿಲ್ಲ. ಸರ್ಕಾರ ಮತ್ತು ಜಿಲ್ಲಾಡಳಿತ ಸಕ್ಕರೆ ಕಾರ್ಖಾನೆಗಳ ಮಾಲೀಕರ ರಕ್ಷಣೆಗಾಗಿ ಪರೋಕ್ಷವಾಗಿ ಕೆಲಸ ಮಾಡುತ್ತಿವೆ ಎಂದು ರೈತರು ದೂರಿದರು.

2013-14ರಿಂದ 2017-18ನೇ ಸಾಲಿನ ವರೆಗೆ ಜಿಲ್ಲೆಯಲ್ಲಿ 22 ಸಕ್ಕರೆ ಕಾರ್ಖಾನೆಗಳ ಪೈಕಿ 15 ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿವೆ. ಈ ಕುರಿತು ಜಿಲ್ಲಾಧಿಕಾರಿಗೆ 2 ವರ್ಷಗಳಿಂದ ದಾಖಲೆ ಸಮೇತ ಮನವಿ ಸಲ್ಲಿಸುತ್ತಿದ್ದೇವೆ. ಆದರೆ, ಕ್ರಮ ಜರುಗಿಸದೆ ಯಾವುದೆ ಕಾರ್ಖಾನೆಗಳು ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿಲ್ಲ ಎಂದು ಹೇಳುತ್ತಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಕೆಲ ಕಾರ್ಖಾನೆಗಳು ಕಬ್ಬು ನುರಿಸಲು ಆರಂಭಿಸಿ 40 ದಿನಗಳು ಕಳೆದಿವೆ. ಈ ವರೆಗೆ ಬಿಲ್ ಪಾವತಿಸಿಲ್ಲ. ಎಫ್‌ಆರ್‌ಪಿ ಜತೆಗೆ 14 ದಿನಗಳಲ್ಲಿ ಬಿಲ್ ನೀಡಬೇಕು ಎಂಬ ಕಾರ್ಖಾನೆಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳುತ್ತಿದ್ದಾರೆ. ಆದರೆ, ಈ ವರೆಗೆ ಯಾವುದೇ ಕಾರ್ಖಾನೆ ಬಿಲ್ ನೀಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಚಾಲಕ ಚೂನಪ್ಪ ಪೂಜೇರಿ, ಭಾರತೀಯ ಕೃಷಿಕ ಸಮಾಜ(ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ, ಅಶೋಕ ಯಮಕನಮರಡಿ, ಜಯಶ್ರೀ ಗುರನ್ನವರ, ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರ ಶಾಂತಕುಮಾರ, ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷ ಲಿಂಗರಾಜ ಪಾಟೀಲ ಇತರರು ಉಪಸ್ಥಿತರಿದ್ದರು.

ಸಿಎಂ ಬಹಿರಂಗ ಚರ್ಚೆ ನಡೆಸಲಿ

ಚಳಿಗಾಲ ಅಧಿವೇಶನ ಮುಗಿಯುವುದರ ಒಳಗಾಗಿ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಅಧ್ಯಕ್ಷತೆಯಲ್ಲಿ ಎಲ್ಲ ರೈತರ ಸಮ್ಮುಖದಲ್ಲಿಯೆ ಬಹಿರಂಗ ಚರ್ಚೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು. ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳಿಂದ ಬಡ್ಡಿ ಸಮೇತ ಬಿಲ್ ವಸೂಲಿ ಮಾಡಬೇಕು. ಇಲ್ಲದಿದ್ದರೆ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.

ಕೋಡಿಹಳ್ಳಿ ದೂರವಿಟ್ಟ ರೈತರು

ಕಬ್ಬು ಬೆಳೆಗಾರರ ವಿಷಯದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಸಕ್ಕರೆ ಕಾರ್ಖಾನೆಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲಾ ಸಂಘಟನೆಗಳ ಮುಖಂಡರು ಪ್ರತಿಭಟನೆಯಿಂದ ದೂರ ಇಟ್ಟಿದ್ದಾರೆ. ಹಾಗಾಗಿ ಸುವರ್ಣ ವಿಧಾನಸೌಧದ ಬಳಿಯ ಕೊಂಡಸಕೊಪ್ಪ ಗ್ರಾಮದಲ್ಲಿ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ರೈತರು ಭಾಗವಹಿಸಿಲ್ಲ. ಎಲ್ಲ ರೈತರು ಜಿಲ್ಲಾಧಿಕಾರಿ ಕಚೇರಿ ಎದುರಿನ ಪ್ರತಿಭಟನೆ ಸ್ಥಳದಲ್ಲಿ ಉಳಿದುಕೊಂಡರು.