ಮದ್ದೂರು: ಸರ್ಕಾರಿ ಶಾಲೆಗಳ ಉಳಿವಿಗೆ ಹಾಗೂ ಪುನರುಜ್ಜೀವನಗೊಳಿಸಲು ಹಿರಿಯ ವಿದ್ಯಾರ್ಥಿಗಳು ಕಂಕಣಬದ್ಧರಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ ತಿಳಿಸಿದರು.

ಪಟ್ಟಣದ ಶಿವಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾವು ಓದಿದ ಸರ್ಕಾರಿ ಶಾಲೆಗಳು ನಮಗೆ ವಿದ್ಯೆ, ಜ್ಞಾನ, ಬದುಕು ರೂಪಿಸಿಕೊಳ್ಳಲು ಕೆಲಸ ಸೇರಿದಂತೆ ಎಲ್ಲವನ್ನು ಕೊಟ್ಟಿದೆ. ಆದರೆ, ಶಾಲೆಗೆ ನಾವು ಏನು ಕೊಟ್ಟಿದೇವೆ ಎಂಬುದು ಮುಖ್ಯವಾಗುತ್ತದೆ ಎಂದರು.
ನಾವು ಓದಿದ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದ ಜತೆಗೆ ಹಿರಿಯ ವಿದ್ಯಾರ್ಥಿಗಳು ಕೈ ಜೋಡಿಸುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಹಲವಾರು ವಿದ್ಯಾರ್ಥಿಗಳು ಉನ್ನತ ಸ್ಥಾನಮಾನಗಳನ್ನು ಅಲಂಕರಿಸಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಆದ್ದರಿಂದ ಪಾಲಕರು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಬೇಕು ಎಂದು ಮನವಿ ಮಾಡಿದರು.
ಅಕ್ಷರ ದಾಸೋಹ ಇಲಾಖೆ ಸಹಾಯಕ ನಿರ್ದೇಶಕಿ ರಾಜೇಶ್ವರಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ ಸೇರಿದಂತೆ ಹಲವು ಸೌಕರ್ಯಗಳನ್ನು ನೀಡುವ ಜತೆಗೆ ನುರಿತ ಶಿಕ್ಷಕರು ಇರುವುದರಿಂದ ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಎಸ್.ಆರ್.ಶಿವಕುಮಾರ್ ವಹಿಸಿ ಮಾತನಾಡಿದರು. ಯುವ ಕಾಂಗ್ರೆಸ್ ಅಧ್ಯಕ್ಷ ಕೀರ್ತಿಕುಮಾರ್, ಶಿಕ್ಷಣ ಸಂಯೋಜಕರಾದ ಲೋಕೇಶ್, ದೈಹಿಕ ಶಿಕ್ಷಣ ಸಂಯೋಜಕ ಮಹಾದೇಶ್, ಕ್ಷೇತ್ರ ಸಮನ್ವಯಾಧಿಕಾರಿ ಮಹದೇವಪ್ರಸಾದ್, ಸಿಆರ್‌ಪಿ ಹೇಮಾವತಿ, ಮುಖ್ಯ ಶಿಕ್ಷಕ ಆರ್.ರಾಜಶೇಖರ್ ಇತರರಿದ್ದರು.