More

    ಸಾಗರ ತಾಲೂಕಿನಲ್ಲಿ ಉಲ್ಬಣಿಸಿದ ಕುಡಿಯುವ ನೀರಿನ ಸಮಸ್ಯೆ; ಟ್ಯಾಂಕರ್ ಮೂಲಕ ನೀರು ಪೂರೈಕೆ

    ಸಾಗರ: ತಾಲೂಕಿನ ಸಾಕಷ್ಟು ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಹಲವು ಭಾಗಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಆರಂಭಗೊಂಡಿದೆ.

    ಭೀಮನೇರಿ, ಶಿರವಾಳ, ಗೌತಮಪುರ, ನರಸೀಪುರ, ಬರೂರು, ಆವಿನಹಳ್ಳಿ, ಆಚಾಪುರ, ಎಸ್‌ಎಸ್‌ಬೋಗ್ ಮುಂತಾದ ಕಡೆಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಕೋರಲಾಗಿದ್ದು, ಈಗಾಗಲೇ ನಾಡಕಲಸಿ ಒಳಗೊಂಡಂತೆ ಮೂರು ಪಂಚಾಯಿತಿಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
    ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ತಾಲೂಕು ಕಚೇರಿ ಅಧಿಕಾರಿಗಳು ಖುದ್ದು ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿದ್ದಾರೆ. ತಾಲೂಕು ಆಡಳಿತ ಗುಡ್ಡೆಕೌತಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಂಡಿದೆ ಎಂದು ತಹಸೀಲ್ದಾರ್ ಸೈಯದ್ ಖಲಿಮುಲ್ಲಾ ಪ್ರತಿಕ್ರಿಯಿಸಿದ್ದಾರೆ.
    ಗುಡ್ಡೆಕೌತಿ ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ನಮ್ಮ ತಂಡದ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒ ನಿರ್ದೇಶನದಂತೆ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಲಾಗಿದೆ. ತಾಲೂಕಿನ ಯಾವುದೇ ಭಾಗದಲ್ಲೂ ಕುಡಿಯುವ ನೀರಿನ ಸಮಸ್ಯೆ ಇದ್ದರೆ ನಮ್ಮ ತಂಡ ತಕ್ಷಣ ತೆರಳಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತಿದೆ. ಗುಡ್ಡೆಕೌತಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಎರಡು ಖಾಸಗಿ ಕೊಳವೆಬಾವಿ ಮಾಲಿಕರ ಜತೆ ಚರ್ಚೆ ಮಾಡಿ ಗ್ರಾಮಕ್ಕೆ ನೀರು ಪೂರೈಕೆ ಮಾಡಲು ಸಹಕಾರ ನೀಡುವಂತೆ ಕೋರಲಾಗಿದೆ. ಇದಕ್ಕೆ ಪೂರಕ ಸ್ಪಂದನೆ ಸಿಕ್ಕಿದೆ ಎಂದಿದ್ದಾರೆ.
    ಮಾ.23ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಇದ್ದರೆ 24 ಗಂಟೆಯೊಳಗೆ ಬಗೆಹರಿಸಬೇಕು ಎನ್ನುವ ಆದೇಶದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಲಾಗಿದೆ. ಸಾರ್ವಜನಿಕರು ಕುಡಿಯುವ ನೀರು ಸೇರಿದಂತೆ ಇತರೆ ಸಮಸ್ಯೆಗಳಿದ್ದಲ್ಲಿ ತಾಲೂಕು ಆಡಳಿತದ ಗಮನಕ್ಕೆ ತಂದರೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
    ತಾಪಂ ಇಒ ನಾಗೇಶ್ ಬ್ಯಾಲದ್, ಮಹ್ಮದ್ ಹನೀಫ್, ವಿಜಯಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts