More

    ವೃತ್ತಿಪರತೆ ಜತೆಗೆ ಸಾಧನೆಯೂ ಮುಖ್ಯ, ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಟಿಬಿ ನಾಗರಾಜ್ ಅಭಿಮತ, ಸರ್ಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ

    ಬೆಂಗಳೂರು ಗ್ರಾಮಾಂತರ: ಸರ್ಕಾರಿ ನೌಕರರು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಅವಶ್ಯ ಎಂದು ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂಟಿಬಿ ನಾಗರಾಜ್ ಸಲಹೆ ನೀಡಿದರು.

    ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ವೃತ್ತಿಪರತೆ ಜತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆ ಮಾಡಬೇಕು. ಗ್ರಾಮೀಣ ಭಾಗದಿಂದ, ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲೂ ವಿಜೇತರಾಗಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹೇಳಿದರು.

    ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಮಾತನಾಡಿ, ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಜಿಲ್ಲಾಧಿಕಾರಿ ಅವರು ಕೋನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 5 ಎಕರೆ ಭೂಮಿ ಗುರುತಿಸಿ ಮಂಜೂರು ಮಾಡಿದ್ದಾರೆ, ಯೋಜನಾ ಸೇವಾ ಇಲಾಖೆಯಿಂದ ತಂತಿ ಬೇಲಿ ಹಾಕುವ ಕೆಲಸ ಆಗುತ್ತಿದೆ. ಕ್ರೀಡಾಂಗಣದ ಜತೆಗೆ ಜಿಲ್ಲೆಗೆ ಕ್ರೀಡಾ ಹಾಸ್ಟೆಲ್, ಜಿಲ್ಲಾಸ್ಪತ್ರೆ ವ್ಯವಸ್ಥೆಗೆ ಸಚಿವರೊಂದಿಗೆ ಪ್ರಸ್ತಾಪಿಸಿದ್ದು, ಇದಕ್ಕೆ ಎಲ್ಲರ ಸಹಕಾರ ಅವಶ್ಯಕತೆ ಇದೆ ಎಂದರು. ಸರ್ಕಾರಿ ನೌಕರರು, ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿರುವುದು ಸಂತಸ ತಂದಿದೆ ಕ್ರೀಡೆಯಲ್ಲಿ ಸೋಲು ಗೆಲುವಿನ ಲೆಕ್ಕದ ಬದಲು, ಭಾಗವಹಿಸುವಿಕೆ ಮುಖ್ಯ ಎಂದು ಅಭಿಪ್ರಾಯಪಟ್ಟರು.

    ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಶಿವರುದ್ರೇಗೌಡ ಮಾತನಾಡಿ, ಮಾನಸಿಕ ಮತ್ತು ದೈಹಿಕ ಒತ್ತಡಗಳಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ. ರಾಜ್ಯ ಸರ್ಕಾರಿ ನೌಕರರ ಸಂಘ ಸದಾ ನಿಮ್ಮೊಂದಿಗಿದ್ದು, ನಿಮ್ಮ ಕುಂದುಕೊರತೆ ಆಲಿಸಿ, ಪರಿಹರಿಸುವ ಪ್ರಯತ್ನ ಮಾಡಲಾಗುತ್ತದೆ ಎಂದರು.

    ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನಂತರ ಕ್ರೀಡಾಜ್ಯೋತಿ ಬೆಳಗಲಾಯಿತು, ಬಣ್ಣದ ಬಲೂನ್ ಹಾರಿಬಿಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

    ಕಳೆದ ವರ್ಷ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ರಾಜ್ಯಮಟ್ಟದಲ್ಲಿ ವಿಜೇತರಾದ ಭರತನಾಟ್ಯ ನೃತ್ಯ ವಿಭಾಗದ ಮಿಲನಾ ಮತ್ತು ಕಥಕ್ಕಳಿ ಮತ್ತು ಮಣಿಪುರಿ ನೃತ್ಯ ವಿಭಾಗದ ಲೀಲಾವತಿ ಅವರನ್ನು ಸನ್ಮಾನಿಸಲಾಯಿತು.

    ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಶಿವರುದ್ರೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಂ.ವಿಜಯಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕಿ ಆರ್.ಗೀತಾ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts