ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಧರ್ಮ ಪಾಲಿಸಿ

ಆಲೂರು: ಪಕ್ಷದ ಹೈಕಮಾಂಡ್ ಆದೇಶದಂತೆ ಹಾಸನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಜ್ವಲ್ ರೇವಣ್ಣ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ತಾಲೂಕು ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಜಿ.ಆರ್.ರಂಗನಾಥ್ ತಿಳಿಸಿದರು.

ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಜೆಡಿಎಸ್ ವಿರುದ್ಧವೇ ಹೋರಾಟ ಮಾಡಿಕೊಂಡು ಬಂದಿರುವ ನಾವು ಅದೇ ಪಕ್ಷಕ್ಕೆ ಮತ ಹಾಕಬೇಕೆಂದಾಗ ನೋವು ಬರುವುದು ಸಹಜ. ಆದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಇದ್ದು ಚುನಾವಣೆಯಲ್ಲಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿರುವ ಪರಿಣಾಮ ಮೈತ್ರಿ ಧರ್ಮ ಪಾಲಿಸಬೇಕಾದ ಅನಿವಾರ್ಯತೆ ಒದಗಿದೆ ಎಂದರು.

ಮುಖಂಡ ಸಿದ್ದಯ್ಯ ಮಾತನಾಡಿ, ಜಿಲ್ಲೆಯಲ್ಲಿ ಜೆಡಿಎಸ್‌ಗೆ ಮತ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಮನಸ್ಸು ಮಾಡುವುದಿಲ್ಲ. ಆದರೆ ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಬೇಕಾದರೆ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಲೇಬೇಕಾದ ಅನಿವಾರ್ಯತೆ ಇದೆ ಎಂದರು.

ಸಭೆಯಲ್ಲಿ ಮುಖಂಡರಾದ ಶಿವರಾಮೇಗೌಡ, ಸಣ್ಣಸ್ವಾಮಿ, ಅಜ್ಜೇನಹಳ್ಳಿ ರಂಗಯ್ಯ ಮತ್ತಿತರರು ಭಾಗವಹಿಸಿದ್ದರು.