

ಹೈದರಾಬಾದ್: ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ಬಾರದ ಕಾರಣ ಗರ್ಭಿಣಿ ಮಹಿಳೆಯೊಬ್ಬರು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯ ತುಳಸಿಪೇಟೆ ಗ್ರಾಮದಲ್ಲಿ ನಡೆದಿದೆ.
ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ನಿರ್ಮಲ್ ಜಿಲ್ಲೆ ತುಳಸಿಪೇಟೆ ಗ್ರಾಮದ ಮಹಿಳೆ ಗಂಗಾಮಣಿ ಅವರಿಗೆ ಶುಕ್ರವಾರ ಬೆಳಗಿನ ಜಾವ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಆ್ಯಂಬುಲೆನ್ಸ್ಗೆ ಕರೆ ಮಾಡಲಾಗಿದೆ. ಆ್ಯಂಬುಲೆನ್ಸ್ ಬರುವುದು ತಡವಾಗುತ್ತದೆ ಎಂದು ಅರಿತ ಮಹಿಳೆ ಕುಟುಂಬಸ್ಥರು ನಡೆದುಕೊಂಡು ಹೋಗಿ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಿದ್ದಾರೆ.
ನಡೆದುಕೊಂಡು ಹೋಗುವ ವೇಳೆ ಮಹಿಳೆಗೆ ಹೆರಿಗೆ ನೋವು ಜಾಸ್ತಿಯಾಗಿದ್ದು, ರಸ್ಥೆ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಜನ್ಮ ನೀಡಿದ ಕೆಲ ಘಂಟೆಗಳ ಬಳಿಕ ಸ್ಥಳಕ್ಕೆ ಆಗಮಿಸಿದ ಆ್ಯಂಬುಲೆನ್ಸ್ ಹಾಗೂ ವೈದ್ಯರ ತಂಡ ತಾಯಿ ಹಾಗೂ ನವಜಾತ ಶಿಶುವನ್ನು ಜಿಲ್ಲಾಸ್ಪತ್ರೆಯಲ್ಲಿರುವ ಆರೈಕೆ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.
ತಾಯಿ ಹಾಗೂ ಮಗು ಇಬ್ಬರು ಆರೋಗ್ಯಕರವಾಗಿದ್ದು, ಸುರಕ್ಷಿತವಾಗಿದ್ದಾರೆ. ಆ್ಯಂಬುಲೆನ್ಸ್ ತಡವಾಗಿ ತೆರಳಿದ್ದಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.