

Delhi: ದೆಹಲಿಯ ಕೆಂಪು ಕೋಟೆಯ ಬಳಿ ನಡೆದ ಕಾರು ಸ್ಫೋಟಕ್ಕೆ ಸಂಬಂಧಪಟ್ಟ ಪ್ರತಿಯೊಬ್ಬ ಅಪರಾಧಿಯನ್ನು ಪತ್ತೆಹಚ್ಚಲು ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಮಂಗಳವಾರ( ನ 11) ಆದೇಶಿಸಿದ್ದಾರೆ.
ತಮ್ಮ ಅಧಿಕೃತ ಎಕ್ಸ್ ಖಾತೆಯ ಮೂಲಕ ವಿಷಯ ಬಹಿರಂಗಪಡಿಸಿರುವ ಷಾ, ದೆಹಲಿ ಕಾರು ಸ್ಫೋಟದ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಲಾಗಿದೆ. ಈ ಘಟನೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ಅಪರಾಧಿಯನ್ನು ಬೇಟೆಯಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಕೃತ್ಯದಲ್ಲಿ ತೊಡಗಿಸಿಕೊಂಡ ಎಲ್ಲರೂ ನಮ್ಮ ತನಿಖಾ ಸಂಸ್ಥೆಗಳ ಸಂಪೂರ್ಣ ಕೋಪವನ್ನು ಎದುರಿಸಬೇಕಾಗುತ್ತದೆ ಎಂದು ಬರೆದುಕೊಂಡಿದ್ದಾರೆ.
ಸ್ಫೋಟದ ಬಳಿಕ ಮಧ್ಯ ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿಯಾದ ಷಾ, ಕಾರು ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಯಿಂದ ಪದಗಳಲ್ಲಿ ವರ್ಣಿಸಲಾಗದಷ್ಟು ನೋವುಂಟಾಗಿದೆ, ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು ಎಂದರು. ಗೃಹ ಸಚಿವಾಲಯವು ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸಿದೆ.
ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಬಳಿ ಚಲಿಸುತ್ತಿದ್ದ ಹುಂಡೈ ಐ20 ಕಾರಿನೊಳಗೆ ಸಂಭವಿಸಿರುವ ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿದ್ದು, 29 ಜನ ಗಾಯಗೊಂಡಿದ್ದಾರೆ. ಸ್ಫೋಟದ ವೇಳೆ ಹತ್ತಿರವೇ ಇದ್ದ ಅನೇಕ ವಾಹನಗಳು ಸುಟ್ಟುಹೋಗಿದ್ದು, ಹರಿಯಾಣ ನೋಂದಣಿ ಸಂಖ್ಯೆಯನ್ನು ಹೊಂದಿರುವ ಕಾರಿನಲ್ಲಿ ಸಂಭವಿಸಿದ ಈ ಘಟನೆ ದೆಹಲಿ ಪೊಲೀಸರು, ಎನ್‌ಐಎ, ಎನ್‌ಎಸ್‌ಜಿ ಮತ್ತು ವಿಧಿವಿಜ್ಞಾನ ತಂಡಗಳಿಂದ ಉನ್ನತ ಮಟ್ಟದ ತನಿಖೆಗೆ ಕಾರಣವಾಗಿದೆ.
ಯುಎಪಿಎ ಮತ್ತು ಸ್ಫೋಟಕ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ಭದ್ರತಾ ತಪಾಸಣೆಯೊಂದಿಗೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು (ಮಂಗಳವಾರ 11) ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಈ ವೇಳೆ ಮಾತನಾಡಿದ ಷಾ, ಎಲ್ಲಾ ಕೋನದಿಂದಲೂ ಸಮಗ್ರ ತನಿಖೆ ನಡೆಸುವ ಭರವಸೆ ನೀಡಿದರು. ಪ್ರಾರಂಭಿಕ ತನಿಖೆಯ ಪ್ರಕಾರ ಈ ವಾಹನವನ್ನು ಪುಲ್ವಾಮಾ ನಿವಾಸಿಗೆ ಸಂಬಂಧಿಸಿದ್ದು ಎನ್ನಲಾಗಿದ್ದು, ಇದು ಭಯೋತ್ಪಾದಕ ಸಂಪರ್ಕದ ಕುರಿತಾದ ಅನುಮಾನಗಳು ಹುಟ್ಟಿಕೊಳ್ಳಲು ಕಾರಣವಾಗಿದೆ. ಸ್ಫೋಟವಾಗುವ ಕೆಲವೇ ಕ್ಷಣಗಳ ಮೊದಲು ಕೆಂಪು ಕೋಟೆಯ ಬಳಿ, ಶಂಕಿತನ ಕಾರು ಇರುವುದನ್ನು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದ್ದು, ಪೊಲೀಸರು 100 ಕ್ಕೂ ಹೆಚ್ಚು ವೀಡಿಯೊ ತುಣುಕುಗಳನ್ನು ಪರಿಶೀಲಿಸುತ್ತಿದ್ದಾರೆ. ಸಂಭವಿಸಿರುವ ಘಟನೆಯು ಯೋಜಿತ ಭಯೋತ್ಪಾದಕ ದಾಳಿಯೇ, ಇಲ್ಲವೇ ಆತ್ಮಹುತಿ ಬಾಂಬ್ ದಾಳಿಯೇ ಎಂದು ತನಿಖೆ ನಡೆಸುತ್ತಿದ್ದು, ನಾಲ್ವರನ್ನು ಬಂಧಿಸಲಾಗಿದೆ.(ಏಜೆನ್ಸೀಸ್)