ಅಂಕಣ

'ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ': ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೆಚ್ಚು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು. ನಿಮಗೆ ಅಕ್ಷತೆ ಬೇಕಾ? ಗ್ಯಾರಂಟಿಗಳು ಬೇಕಾ? ಎಂಬ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೆ ತೀವ್ರ ವಿವಾದಕ್ಕೀಡಾಗುತ್ತಿರುವ ಬೆನ್ನಲ್ಲೇ ಸ್ಪಷ್ಟನೆ ನೀಡಿದರು.

ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಗಡಿ ಶಾಸಕರಾದ ಬಾಲಕೃಷ್ಣ ಅವರ ಕಾಂಗ್ರೆಸ್ ಲೋಕಸಭೆಯಲ್ಲಿ ಗೆಲುವು ಸಾಧಿಸದಿದ್ದರೆ, ಗ್ಯಾರಂಟಿಗಳನ್ನು ರದ್ದುಗೊಳಿಸಲಾಗುವುದು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತ ಮುಂದುವರೆಸಲಾಗುವುದು ಎಂದರು.

ಕೇಂದ್ರ ಬಜೆಟ್ ಮಂಡನೆ ನಂತರ ಪ್ರತಿಕ್ರಿಯೆ: ಕೇಂದ್ರ ಸರ್ಕಾರ ಫೆಬ್ರವರಿ 1 ರಂದು 2024–25 ನೇ ಸಾಲಿನ ಮಧ್ಯಂತರ ಬಜೆಟ್‌ ಮಂಡಿಸಲಿದ್ದು, ಈ ಬಗ್ಗೆ ಪ್ರತಿಕ್ರಿಯೆ ನಾಳೆ ನೀಡುತ್ತೇನೆ. ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದ್ದು, ಅವರ ಕಾರ್ಯಚಟುವಟಿಕೆಗಳನ್ನು ಪರಿಶೀಲನೆಯನ್ನು ನಡೆಸಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳು ಕಳೆದಿದ್ದು, ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಈ ಅಧಿಕಾರಗಳ ಸಲಹೆ ಸೂಚನೆ, ಕಾರ್ಯವೈಖರಿಗಳ ಬಗ್ಗೆ ವಿವರ ಪಡೆಯಲಾಗಿದೆ ಎಂದರು.

ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆ: ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲು ವಾವಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕನ್ನಡ ಬಳಕೆ ಕಡ್ಡಾಯದ ಬಗ್ಗೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ಮಾನ್ಯ ರಾಜ್ಯಪಾಲರಿಗೆ ಕಳಿಸಲಾಗಿತ್ತು. ಆದರೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮುಂಚೆಯೇ ಅಧಿವೇಶನ ಪ್ರಾರಂಭವಾದ ಕಾರಣ ವಾಪಸ್ಸು ಕಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಸಹಾಯಧನ ವಿತರಣೆ ಮತ್ತು ಪುನರ್ವಸತಿ ಸಮಾವೇಶವನ್ನು ಉದ್ಘಾಟಿಸಿದರು.

ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಮಳವಳ್ಳಿ ಶಾಸಕ ನರೇಂದ್ರಸ್ವಾಮಿ, ಮಾಯ್ಕೊಂಡ ಶಾಸಕರಾದ ಬಸಂತಪ್ಪ , ನೆಲಮಂಗಲ ಶಾಸಕರಾದ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಮಾವೇಶದಲ್ಲಿ 4000 ಕ್ಕೂ ಹೆಚ್ಚು ಸಫಾಯಿ ಕರ್ಮಚಾರಿಗಳಿಗೆ ನಗದು ಸಹಾಯಧನ ವಿತರಿಸಲಾಯಿತು.

ಬಾಲಕೃಷ್ಣ ಎಚ್ಚರಿಸಿದ್ದಾರೆ ಅಷ್ಟೇ: ಎಚ್ಚರಿಕೆಯಿಂದಿರಿ ಎಂದಷ್ಟೇ ಬಾಲಕೃಷ್ಣ ಹೇಳಿದ್ದಾರೆ, ಗ್ಯಾರಂಟಿ 5 ವರ್ಷ ಇರಲಿದೆ ಎಂದುನ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸೌಧದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಮಾತ್ರ ಬಾಕಿ ಇವೆ. ಈಗಾಗಲೇ ರಾಜಕೀಯ ಪಕ್ಷಗಳು ಭರ್ಜರಿ ಸಮರಭ್ಯಾಸ ನಡೆಸುತ್ತಿವೆ. ಬಿಜೆಪಿ ರಾಮ ಜಪ ಮಾಡಿದ್ರೆ, ಕಾಂಗ್ರೆಸ್​ ಗ್ಯಾರಂಟಿ ಅಸ್ತ್ರಕ್ಕೆ ಕೈ ಹಾಕಿದೆ. ರಾಜ್ಯದಲ್ಲೂ ಲೋಕ ಕದನದ ಕಾವು ಜೋರಾಗಿದ್ದು, ಇದರ ನಡುವೆ ಮಾಗಡಿ ಕ್ಷೇತ್ರದ ಕಾಂಗ್ರೆಸ್​ ಶಾಸಕ ಹೆಚ್​ಸಿ ಬಾಲಕೃಷ್ಣ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.