ಸಿನಿವಾಣಿ

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್ ​ದರ್ಶನ್​ ಬಂಧನ

ರಮೇಶ್​ ಕುಮಾರ್​​ ಬಿ ಎಡಮೋಳೆ

ಬೆಂಗಳೂರು: ಕೊಲೆ ಪ್ರಕರಣವೊಂದರಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರನ್ನು ಬಂಧಿಸಲಾಗಿದೆ. ಮೈಸೂರಿನ ಕೆಂಪಯ್ಯನಹುಂಡಿ ಗ್ರಾಮದ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ಬಂಧನ ಮಾಡಲಾಗಿದೆ.

ಕಾಮಾಕ್ಷಿ ಪಾಳ್ಯ ಠಾಣಾ ಪೊಲೀಸರು ಬಂಧಿಸಿರುವುದಾಗಿ ಮಾಹಿತಿ ಬಂದಿದೆ. ಕೊಲೆ ಪ್ರಕರಣವೊಂದರ ಬಂಧಿತ ಆರೋಪಿಗಳು ನಟ ದರ್ಶನ್ ಹೆಸರನ್ನು ಬಾಯ್ಬಿಟ್ಟಿರುವ ಹಿನ್ನೆಲೆಯಲ್ಲಿ ದರ್ಶನ್​ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ನಟ ದರ್ಶನ್​ ಅವರನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯ ಶೆಡ್​ ಒಂದರಲ್ಲಿ ಜೂನ್​ 9ರಂದು ರೇಣುಕಾಸ್ವಾಮಿಯ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಕೆಲ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದರು. ಇದೀಗ ಆರೋಪಿಗಳು ದರ್ಶನ್​ ಹೆಸರನ್ನು ಬಹಿರಂಗಪಡಿಸಿದ್ದಾರೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ.

ನಟಿ ಪವಿತ್ರ ಗೌಡಗೆ ರೇಣುಕಸ್ವಾಮಿ ಕೆಟ್ಟದಾಗಿ ಮೆಸೇಜ್​ ಮಾಡಿದ್ದಕ್ಕೆ ಅಪಹರಿಸಿ ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ನಿನ್ನೆ ಮೂವರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು. ಇದೀಗ ಇದೇ ಪ್ರಕರಣದ ನಟ ದರ್ಶನ್ ಸೇರಿದಂತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.