ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಬಂಧನವಾಗಿರುವುದು ಇಡೀ ರಾಜ್ಯಕ್ಕೆ ತಿಳಿದಿದೆ. ಆರೋಪಿಗಳನ್ನು ನ್ಯಾಯಾಲಯ 6 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಪ್ರಕರಣದಲ್ಲಿ ದರ್ಶನ್ ಗೆಳತಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ, ದರ್ಶನ್ ಎ2 ಆರೋಪಿಯಾಗಿದ್ದಾರೆ.
ಸದ್ಯ ದರ್ಶನ್ ಅವರು ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರ ಕಸ್ಟಡಿಯಲ್ಲಿದ್ದಾರೆ. ನಿನ್ನೆಯಷ್ಟೇ ಮೈಸೂರಿನಿಂದ ಬೆಂಗಳೂರಿಗೆ ಕರೆತಂದು ದರ್ಶನ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಮೆಡಿಕಲ್ ಟೆಸ್ಟ್ ಮಾಡಿದ ಬಳಿಕ ಕೋರ್ಟ್ ಮುಂದೆ ಹಾಜರು ಮಾಡಲಾಯಿತು. ಎಲ್ಲ ಆರೋಪಿಗಳನ್ನು ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈಗಾಗಲೇ ಕೊಲೆ ನಡೆದ ಸ್ಥಳದ ಮಹಜರು ಸೇರಿದಂತೆ ಇನ್ನಿತರ ಪ್ರಕ್ರಿಯೆ ನಡೆಯುತ್ತಿದೆ.
ದರ್ಶನ್ ಹೇಳುತ್ತಿರುವುದು ಒಂದೇ ಮಾತು!
ಪೊಲೀಸರು ಎಷ್ಟೇ ವಿಚಾರಣೆ ನಡೆಸಿದರು ದರ್ಶನ್ ಹೇಳುತ್ತಿರುವುದು ಒಂದೇ ಮಾತು ಅದೇನೆಂದರೆ, ನಾನೇನು ಮಾಡಿಲ್ಲ ಮತ್ತು ನನಗೇನು ಗೊತ್ತಿಲ್ಲ ಎನ್ನುತ್ತಿದ್ದಾರೆ. ಪೊಲೀಸ್ ಆಯುಕ್ತರ ಮುಂದೆಯೂ ನಾನು ಕೊಲೆ ಮಾಡಿಲ್ಲ ಸರ್ ಎಂದು ದರ್ಶನ್ ಹೇಳಿಕೆ ನೀಡಿದ್ದಾರೆ. ಸಾಕ್ಷ್ಯಗಳನ್ನು ಮುಂದಿಟ್ಟು ಪೊಲೀಸರು ಪ್ರಶ್ನೆ ಮಾಡಿದರು ದರ್ಶನ್ ಯಾವುದನ್ನು ಒಪ್ಪಿಕೊಳ್ಳುತ್ತಿಲ್ಲ ಎಂದು ತಿಳಿದುಬಂದಿದೆ. ದರ್ಶನ್ ಬಾಯಲ್ಲಿ ನಾನೇನು ಮಾಡಿಲ್ಲ ಎಂಬ ಒಂದೇ ಒಂದು ಹೇಳಿಕೆ ಬರುತ್ತಿದೆ. ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗಲೂ ದರ್ಶನ್ ಏನನ್ನೂ ಮಾತನಾಡದೇ ಮೌನವಾಗಿದ್ದರು ಎಂದು ತಿಳಿದುಬಂದಿದೆ.
ಏನಿದು ಪ್ರಕರಣ?
ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್ಗೆ ಹೇಳಿದ್ದರು. ಈ ವಿಚಾರ ದರ್ಶನ್ಗೆ ತಿಳಿದಿದೆ.
ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.
ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.