ಸಿನಿವಾಣಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲು ಜಾಮೀನು ಸಿಗುವುದು ಈ ಆರೋಪಿಗೆ ಮಾತ್ರ! ದರ್ಶನ್​ ಗತಿ ಏನು?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಯಾವಾಗ ಬಿಡುಗಡೆಯಾಗುತ್ತಾರೆ ಅಂತಾ ಅಭಿಮಾನಿಗಳು ಕಾಯುತ್ತಿದ್ದಾರೆ. ಜುಲೈ 18ರಂದು ನ್ಯಾಯಾಂಗ ಬಂಧನ ಅವಧಿ ಮುಗಿಯಲಿದ್ದು, ಆರೋಪಿಗಳನ್ನು ಮತ್ತೊಮ್ಮೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಜಾಮೀನು ಸಿಗುತ್ತಾ ಅಥವಾ ಮತ್ತೆ ಜೈಲು ಪಾಲಾಗುತ್ತಾರಾ ಕಾದು ನೋಡಬೇಕಿದೆ. ಆದರೆ, ತಕ್ಷಣಕ್ಕೆ ಜಾಮೀನು ಸಿಗುವುದಿಲ್ಲ ಎಂದು ನಿವೃತ್ತ ಎಸ್​ಪಿ ಎಸ್​.ಕೆ. ಉಮೇಶ್​ ಅವರು ಹೇಳಿದ್ದಾರೆ.

ವಿಜಯವಾಣಿ ಜತೆ ಮಾತನಾಡಿದ ಎಸ್​.ಕೆ. ಉಮೇಶ್​, ಇದೊಂದು ಗಂಭೀರ ಪ್ರಕರಣ ಆಗಿರುವುದರಿಂದ ಜಾಮೀನು ಸದ್ಯಕ್ಕೆ ಸಿಗುವುದಿಲ್ಲ. ಹಲವಾರು ಬಾರಿ ಜಾಮೀನು ನಿರಾಕರಣೆಯಾಗುತ್ತದೆ. ಆದರೆ, ಆರೋಪಿ ಪವಿತ್ರಾ ಗೌಡಗೆ ಮೊದಲು ಜಾಮೀನು ದೊರೆಯುತ್ತದೆ. ಮಹಿಳೆಯರಿಗೆ ಕೆಲ ವಿನಾಯಿಗಳು ಇರುವುದರಿಂದ ಪ್ರಕರಣದಲ್ಲಿ ಆಕೆಯ ಪಾತ್ರವನ್ನು ನೋಡಿಕೊಂಡು ಜಾಮೀನು ನೀಡುವ ಸಾಧ್ಯತೆ ಇದೆ. ಇದಾದ ಬಳಿಕ ಉಳಿದವರಿಗೆ ಜಾಮೀನು ಸಿಗಬಹುದು. ಆದರೆ, ಈ ಪ್ರಕ್ರಿಯೆ ಮುಗಿಯಲು ಒಂದು ವರ್ಷಕ್ಕೂ ಅಧಿಕ ಸಮಯವನ್ನು ತೆಗೆದುಕೊಳ್ಳಬಹುದು ಎಂದು ಉಮೇಶ್​ ಅವರು ಹೇಳಿದ್ದಾರೆ.

ನೂರಕ್ಕೆ ನೂರರಷ್ಟು ಸಾಕ್ಷಿಗಳಿದ್ದಾರೆ ಮಾತ್ರ ಆರೋಪಿಗಳಿಗೆ ಶಿಕ್ಷೆಯಾಗುತ್ತದೆ. ನೂರರಲ್ಲಿ ಶೇ. 99ರಷ್ಟಿದ್ದರೂ ಉಳಿದ 1 ಪರ್ಸೆಂಟ್​ನಿಂದ ಆರೋಪಿಗಳು ಶಿಕ್ಷೆಯಿಂದ ಬಚಾವ್​ ಆಗುತ್ತಾರೆ. ಇಡೀ ಪ್ರಕರಣವನ್ನು ನ್ಯಾಯಾಲಯ ಬಹಳ ಸೂಕ್ಷ್ಮದಿಂದ ವಿಚಾರಣೆ ನಡೆಸುತ್ತದೆ. ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಯಾವ ರೀತಿಯಲ್ಲಿ ಸಾಕ್ಷಿಗಳನ್ನು ಪರಿಣಾಮಕಾರಿ ಮುಂದಿಡುತ್ತಾರೋ ಅದರ ಮೇಲೆ ಆರೋಪಿಗಳ ಭವಿಷ್ಯ ನಿಂತಿದೆ. ಒಟ್ಟಾರೆ ಈ ಪ್ರಕರಣದಲ್ಲಿ ಸದ್ಯಕ್ಕಂತೂ ಯಾರಿಗೂ ಜಾಮೀನು ಸಿಗುವುದಿಲ್ಲ ಎಂದು ಉಮೇಶ್​ ಅವರು ತಿಳಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ?

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.