ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ಚಿತ್ರೀಕರಣ ಕೊನೆಗೂ ಮುಕ್ತಾಯವಾಗಿದೆ. ಸುಮಾರು 137 ದಿನಗಳ ಚಿತ್ರೀಕರಣ ನಂತರ ಇತ್ತೀಚೆಗೆ ಚಿತ್ರತಂಡ ಕುಂಬಳಕಾಯಿ ಒಡೆದಿದೆ.
'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ಚಿತ್ರೀಕರಣ 2021ರಲ್ಲೇ ಪ್ರಾರಂಭವಾಗಿತ್ತು. ಆದರೆ, ಈ ಮಧ್ಯೆ '777 ಚಾರ್ಲಿ' ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿರಲಿಲ್ಲವಾದ್ದರಿಂದ, 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರ ಸಹ ವಿಳಂಬವಾಯಿತು. ಕಳೆದ ವರ್ಷದ ಡಿಸೆಂಬರ್ ಕೊನೆಯ ವಾರದಲ್ಲಿ ಚಿತ್ರ ಬಿಡುಗಡೆ ಆಗಬಹುದು ಎಂದು ಹೇಳಲಾಗಿತ್ತು. ಆದರೆ, ಚಿತ್ರೀಕರಣ ಇದೀಗ ಮುಕ್ತಾಯವಾಗಿದೆ.
ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಚಿತ್ರತಂಡ ತೊಡಗಿಸಿಕೊಂಡಿದ್ದು, ಜೂನ್ನಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ. ಆದರೆ, ಜೂನ್ ತಿಂಗಳಲ್ಲಿ ಯಾವಾಗ ಬಿಡುಗಡೆ ಎಂದು ಅಧಿಕೃತ ಘೋಷಣೆಯಾಗಿಲ್ಲ. ಬಿಡುಗಡೆ ದಿನಾಂಕ ಇನ್ನಷ್ಟೇ ಹೊರಬೀಳಬೇಕಿದೆ.
'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಎರಡ್ ಶೇಡ್ಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎರಡು ಕಾಲಘಟ್ಟದಲ್ಲಿ ಕಥೆ ನಡೆಯಲಿದ್ದು, ಒಂದು ಶೇಡ್ಗಾಗಿ ಅವರು ತೂಕ ಹೆಚ್ಚಿಸಿಕೊಂಡಿದ್ದಾರೆ. ರಕ್ಷಿತ್ ಜತೆಗೆ ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ಗೋಪಾಲಕೃಷ್ಣ ದೇಶಪಾಂಡೆ, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ.
'ಸಪ್ತ ಸಾಗರದಾಚೆ ಎಲ್ಲೋ' ಚಿತ್ರವನ್ನು ರಕ್ಷಿತ್ ಶೆಟ್ಟಿ ನಿರ್ಮಿಸಿದ್ದು, ಹೇಮಂತ್ ರಾವ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಮತ್ತು ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ.